
ಬೆಂಗಳೂರು, 12 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಸಮ್ಮತಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‌ಎಸ್, ಕಬಿನಿ ಸೇರಿದಂತೆ ವಿವಿಧ ಜಲಾಶಯಗಳಲ್ಲಿ ಶೇ.47ರಷ್ಟು ನೀರಿನ ಕೊರತೆ ಉಂಟಾಗಿದೆ. ರಾಜ್ಯದ ಜನರಿಗೆ ಕುಡಿಯಲು ನೀರಿನ ಸಮಸ್ಯೆ ಎದುರಾಗಿರುವ ಸಂದರ್ಭದಲ್ಲೇ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ಒಪ್ಪಿಕೊಂಡಿರುವುದು ಕನ್ನಡಿಗರಿಗೆ ಮಾಡಿರುವ ಮಹಾದ್ರೋಹ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವು ಪ್ರದೇಶಗಳಲ್ಲಿ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಬೆಂಗಳೂರಿನ ಜನರೂ ಕುಡಿಯುವ ನೀರಿನ ಲಭ್ಯತೆ ಕುರಿತು ಆತಂಕ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ನೀರಿನ ಪರಿಸ್ಥಿತಿಯನ್ನು ಪರಿಗಣಿಸದೆ ತಮಿಳುನಾಡಿಗೆ ನೀರು ಹರಿಸಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಅಶೋಕ ಹೇಳಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಹುಲ್ ಗಾಂಧಿ ಅವರ ಸೂಚನೆಯಂತೆ ರಾಜಕೀಯ ಲಾಭಕ್ಕಾಗಿ ಮತ್ತು ಮೈತ್ರಿಕೂಟದ ಪಕ್ಷಗಳನ್ನು ಓಲೈಸುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಯ ರಕ್ಷಕರಾಗಿ ನಿಲ್ಲಬೇಕಿದ್ದ ಸರ್ಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಕರ್ನಾಟಕದ ವಾಸ್ತವಿಕ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮಂಡಿಸುವಲ್ಲಿ ವಿಫಲವಾಗಿದೆ ಎಂದು ಅಶೋಕ ಟೀಕಿಸಿದ್ದಾರೆ.
ಸರ್ಕಾರಕ್ಕೆ ನಾಲ್ಕು ಆಗ್ರಹ
ರಾಜ್ಯದ ಹಿತಾಸಕ್ತಿ ಹಾಗೂ ರೈತರ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಅಶೋಕ ಒತ್ತಾಯಿಸಿದ್ದಾರೆ.
ನೀರಾವರಿ ಮತ್ತು ಕಾನೂನು ತಜ್ಞರ ತುರ್ತು ಸಭೆ ಕರೆದು, ರಾಜ್ಯದ ನೀರಿನ ಪರಿಸ್ಥಿತಿಗೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಪರಿಶೀಲಿಸಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ಬಲವಾದ ಕಾನೂನು ಹೋರಾಟ ನಡೆಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಮಿತ್ರಪಕ್ಷಗಳ ರಾಜಕೀಯ ಹಿತಾಸಕ್ತಿಗಿಂತ ಕರ್ನಾಟಕದ ಜನರು ಮತ್ತು ರೈತರ ಹಿತವೇ ಸರ್ಕಾರಕ್ಕೆ ಮುಖ್ಯವಾಗಬೇಕು. ರಾಜ್ಯದ ಜಲ ಸಂಪನ್ಮೂಲಗಳ ವಿಚಾರದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕರ್ನಾಟಕದ ಹಕ್ಕುಗಳನ್ನು ರಕ್ಷಿಸಬೇಕು ಎಂದು ಹೇಳಿದ್ದಾರೆ.
ಕನ್ನಡಿಗರ ಹಿತಾಸಕ್ತಿಯನ್ನು ಕಡೆಗಣಿಸಿ ರಾಜಕೀಯ ಕಾರಣಗಳಿಗಾಗಿ ನೀರು ಹರಿಸಲು ಮುಂದಾದರೆ ರಾಜ್ಯದ ರೈತರು ಮತ್ತು ಜನತೆ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಸಿರುವ ಅಶೋಕ, ಕರ್ನಾಟಕದ ಹಕ್ಕುಗಳಿಗಾಗಿ ಬಿಜೆಪಿ ನಿರಂತರ ಹೋರಾಟ ನಡೆಸಲಿದೆ ಎಂದು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.