
ವಿಜಯಪುರ, 13 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ನಗರದ ವಾರ್ಡ್ ನಂ.4ರ ಎಂ.ಬಿ.ಪಾಟೀಲ ನಗರದ ಬಿ ಬ್ಲಾಕ್ನಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಡಿ ಮಂಜೂರಾದ ₹1 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಆಂತರಿಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಹನುಮಾನ ದೇವಸ್ಥಾನದ ಸಮೀಪ ಭೂಮಿಪೂಜೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೆರವೇರಿಸಿದರು.
ಎಂ.ಬಿ.ಪಾಟೀಲ ನಗರದ ಬಿ ಬ್ಲಾಕ್ನ ಹಲವು ಭಾಗಗಳಲ್ಲಿ ಆಂತರಿಕ ರಸ್ತೆಗಳ ಅಭಿವೃದ್ಧಿಯ ಅಗತ್ಯವಿದ್ದು, ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯನ್ನು ಪರಿಗಣಿಸಿ ಈ ಕಾಮಗಾರಿಗೆ ಅನುದಾನ ಮಂಜೂರು ಮಾಡಲಾಗಿದೆ. ರಸ್ತೆ ಅಭಿವೃದ್ಧಿಯಿಂದ ಬಡಾವಣೆಯ ನಿವಾಸಿಗಳ ಸಂಚಾರಕ್ಕೆ ಅನುಕೂಲವಾಗುವುದರ ಜೊತೆಗೆ, ಮಳೆಗಾಲದಲ್ಲಿ ಉಂಟಾಗುವ ಕೆಸರು, ಗುಂಡಿ ಹಾಗೂ ಸಂಚಾರದ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದು ಸ್ಥಳೀಯರು ಆಶಾಭಾವನೆ ವ್ಯಕ್ತಪಡಿಸಿದರು.
ಭೂಮಿಪೂಜೆ ಕಾರ್ಯಕ್ರಮದ ಬಳಿಕ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿ, ಅವರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಲಾಯಿತು. ಕುಡಿಯುವ ನೀರು, ಚರಂಡಿ ವ್ಯವಸ್ಥೆ, ರಸ್ತೆ, ಬೀದಿ ದೀಪ ಸೇರಿದಂತೆ ಬಡಾವಣೆಯ ಮೂಲಸೌಕರ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ನಗರದ ಪ್ರತಿಯೊಂದು ವಾರ್ಡ್ನಲ್ಲಿಯೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಜನರಿಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು.
₹1 ಕೋಟಿ ವೆಚ್ಚದಲ್ಲಿ ನಡೆಯಲಿರುವ ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಶೀಘ್ರವಾಗಿ ಅನುಕೂಲ ಕಲ್ಪಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆಯೂ ಮನವಿ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರು, ಉಪಮಹಾಪೌರರು, ಮಾಜಿ ಹಾಗೂ ಹಾಲಿ ಮಹಾನಗರ ಪಾಲಿಕೆ ಸದಸ್ಯರು, ವಿವಿಧ ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಎಂ.ಬಿ.ಪಾಟೀಲ ನಗರದ ಬಿ ಬ್ಲಾಕ್ನ ಸ್ಥಳೀಯ ನಿವಾಸಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande