
ವಿಜಯಪುರ, 13 ಆಗಸ್ಟ್ (ಹಿ.ಸ.)
ಆ್ಯಂಕರ್ : 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಕ್ಷದ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಭವ್ಯವಾದ 300 ಮೀಟರ್ ಉದ್ದದ ‘ತ್ರಿವರ್ಣ ಧ್ವಜ ಯಾತ್ರೆ’ ನಡೆಯಿತು. ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಯಾತ್ರೆಯು ಗಾಂಧಿ ಚೌಕಿ, ಬಸವೇಶ್ವರ ವೃತ್ತ, ಕನಕದಾಸ ವೃತ್ತ ಹಾಗೂ ಅಂಬೇಡ್ಕರ್ ವೃತ್ತದವರೆಗೆ ಸಾಗಿತು.
ಯಾತ್ರೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ದೇಶಾಭಿಮಾನಿಗಳು ಪಾಲ್ಗೊಂಡು ಗಮನ ಸೆಳೆದರು. ಬೃಹತ್ ತ್ರಿವರ್ಣ ಧ್ವಜವನ್ನು ಹಿಡಿದು ವಿದ್ಯಾರ್ಥಿಗಳು ಹೆಜ್ಜೆ ಹಾಕಿದ ದೃಶ್ಯ ನಗರದ ಪ್ರಮುಖ ರಸ್ತೆಗಳಲ್ಲಿ ದೇಶಭಕ್ತಿಯ ವಾತಾವರಣ ನಿರ್ಮಿಸಿತು.
ವಿದ್ಯಾರ್ಥಿಗಳು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ‘ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’ ಸೇರಿದಂತೆ ವಿವಿಧ ದೇಶಭಕ್ತಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಯಾತ್ರೆಯುದ್ದಕ್ಕೂ ರಾಷ್ಟ್ರಧ್ವಜಗಳ ಕಂಗೊಳಿಸುವಿಕೆ ಹಾಗೂ ದೇಶಭಕ್ತಿ ಘೋಷಣೆಗಳು ಸಾರ್ವಜನಿಕರ ಗಮನ ಸೆಳೆದವು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಸಾರ್ವಭೌಮತೆ ಮತ್ತು ಏಕತೆಯ ಮಹತ್ವವನ್ನು ಯುವಜನತೆಗೆ ತಿಳಿಸುವ ಉದ್ದೇಶದಿಂದ ಆಯೋಜಿಸಿದ್ದ ಈ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು. ದೇಶದ ಸ್ವಾತಂತ್ರ್ಯವನ್ನು ಸಂಭ್ರಮಿಸುವುದರ ಜೊತೆಗೆ ರಾಷ್ಟ್ರದ ಏಕತೆ, ಅಖಂಡತೆ ಹಾಗೂ ದೇಶಪ್ರೇಮದ ಸಂದೇಶವನ್ನು ಜನರಿಗೆ ಸಾರುವ ವೇದಿಕೆಯಾಗಿ ಯಾತ್ರೆ ರೂಪುಗೊಂಡಿತು.
ನಗರದ ಪ್ರಮುಖ ವೃತ್ತಗಳು ಮತ್ತು ರಸ್ತೆಗಳ ಮೂಲಕ ಸಾಗಿದ ತ್ರಿವರ್ಣ ಧ್ವಜ ಯಾತ್ರೆಗೆ ಸಾರ್ವಜನಿಕರಿಂದಲೂ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಯಾತ್ರೆಯಲ್ಲಿ ಭಾಗವಹಿಸಿದ್ದ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಪ್ರಗತಿಪರ ಸಂಘಟನೆ ಮುಖಂಡ ರಘು ಅಣ್ಣಿಗೇರಿ ಕರೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande