
ಬೆಂಗಳೂರು, 13 ಆಗಸ್ಟ್ (ಹಿ.ಸ.):
ಆ್ಯಂಕರ್:
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡ ಚಳುವಳಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬೆಂಬಲ ನೀಡದ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಮುಂದುವರಿದಿದೆ.
ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಂಗಳೂರು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ ಅವರನ್ನು ಅವರ ನಿವಾಸದಿಂದ ಪೊಲೀಸರು ವಶಕ್ಕೆ ಪಡೆದಿದ್ದು, ವಾಟಾಳ ನಾಗರಾಜ ಅವರನ್ನು ವಶಕ್ಕೆ ಪಡೆದಿದ್ದಾರೆ.
ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಪರಿಶೀಲಿಸಲಾಗಿದೆ. ನಗರದ ಕೇಂದ್ರ, ಪಶ್ಚಿಮ, ವಾಯುವ್ಯ ಹಾಗೂ ಎಲೆಕ್ಟ್ರಾನಿಕ್ ಸಿಟಿ ವಿಭಾಗಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ತಮಿಳು ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ಪ್ರದೇಶಗಳು ಹಾಗೂ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.
ಪ್ರತಿಭಟನೆಗೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಅವಕಾಶ ನೀಡಲಾಗಿದ್ದು, ಟೌನ್‌ಹಾಲ್ ಸೇರಿದಂತೆ ಇತರ ಪ್ರದೇಶಗಳಿಂದ ರ‍್ಯಾಲಿ ನಡೆಸಲು ಅವಕಾಶವಿಲ್ಲ. ಅಂಗಡಿ-ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವುದು, ಸಾರಿಗೆಗೆ ಅಡ್ಡಿಪಡಿಸುವುದು ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡುವುದು ಶಿಕ್ಷಾರ್ಹ ಅಪರಾಧ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮೆಜೆಸ್ಟಿಕ್ ಮತ್ತು ಶಾಂತಿನಗರ ಬಸ್ ನಿಲ್ದಾಣಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಎಂದಿನಂತೆ ಮುಂದುವರೆದಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.