
ಬಾಗಲಕೋಟೆ, 14 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಸುಕ್ಷೇತ್ರ ಮಲ್ಲಾಪುರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಾಲಯದ ನೂತನ ಮೂರ್ತಿಗಳ ಉತ್ಸವ ಹಾಗೂ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಅಂಗವಾಗಿ ಶುಕ್ರವಾರ ನೂತನ ಮೂರ್ತಿಗಳ ಭವ್ಯ ಮೆರವಣಿಗೆ ಹಾಗೂ ಕುಂಭಮೇಳ ಕಾರ್ಯಕ್ರಮವು ಭಕ್ತಿಭಾವ ಮತ್ತು ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.
ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭಗೊಂಡ ಮೆರವಣಿಗೆಯಲ್ಲಿ ಶ್ರೀ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ನೂತನ ಮೂರ್ತಿಗಳನ್ನು ಭವ್ಯವಾಗಿ ಅಲಂಕರಿಸಿ ಮೆರವಣಿಗೆ ನಡೆಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.
ಮೆರವಣಿಗೆಯುದ್ದಕ್ಕೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ಕೈಂಕರ್ಯಗಳು ಹಾಗೂ ಕುಂಭಮೇಳದ ವೈಭವ ಗಮನ ಸೆಳೆಯಿತು. ಮಹಿಳೆಯರು ಕುಂಭಗಳನ್ನು ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಿದ್ದು, ಭಕ್ತಿಗೀತೆಗಳು ಹಾಗೂ ಧಾರ್ಮಿಕ ಘೋಷಣೆಗಳಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇವಾಲಯದ ಸುತ್ತಮುತ್ತಲಿನ ಪ್ರದೇಶವನ್ನು ಅಲಂಕರಿಸಲಾಗಿದ್ದು, ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಚರಂತಿಮಠದ ಪೂಜ್ಯರಾದ ಪ್ರಭುಮಹಾಸ್ವಾಮಿಗಳು, ಟೀಕಿನಮಠದ ಪೂಜ್ಯರಾದ ಮಲ್ಲಿಕಾರ್ಜುನ ಸ್ವಾಮಿಗಳು, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಸೇರಿದಂತೆ ವಿವಿಧ ಮಠಾಧೀಶರು, ಧಾರ್ಮಿಕ ಮುಖಂಡರು, ಹಿರಿಯರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಮೆರವಣಿಗೆ ಮತ್ತು ಕುಂಭಮೇಳದಲ್ಲಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ದೇವಾಲಯದ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಶ್ರದ್ಧಾ-ಭಕ್ತಿಯಿಂದ ನೆರವೇರಲಿ ಹಾಗೂ ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಕರುಣಿಸಲಿ ಎಂದು ಗಣ್ಯರು ಹಾಗೂ ಭಕ್ತರು ಪ್ರಾರ್ಥಿಸಿದರು.
ಶ್ರೀ ಮಲ್ಲಿಕಾರ್ಜುನ ದೇವಾಲಯದ ನೂತನ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮವು ಸುಕ್ಷೇತ್ರ ಮಲ್ಲಾಪುರದ ಧಾರ್ಮಿಕ ಪರಂಪರೆಗೆ ಮತ್ತಷ್ಟು ಮೆರುಗು ನೀಡಿದ್ದು, ಈ ಪವಿತ್ರ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವಂತೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande