
ವಿಜಯಪುರ, 14 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯ
ತಾಳಿಕೋಟಿ ತಾಲೂಕಿನ ಬೇಕಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಶ್ರೀಮತಿ ಅನುಸೂಯಾ ಚಲವಾದಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಜಲಸಂರಕ್ಷಣೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಯ ಪ್ರಗತಿಯನ್ನು ಅಧಿಕಾರಿಗಳು ಸ್ಥಳದಲ್ಲೇ ಪರಿಶೀಲಿಸಿದರು.
ಕೆರೆಯಲ್ಲಿರುವ ಹೂಳು ತೆರವುಗೊಳಿಸುವ ಮೂಲಕ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದು ಹಾಗೂ ಮುಂದಿನ ದಿನಗಳಲ್ಲಿ ಮಳೆ ನೀರನ್ನು ಸಮರ್ಪಕವಾಗಿ ಸಂಗ್ರಹಿಸಲು ಅನುಕೂಲವಾಗುವಂತೆ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಡಿಪಿಸಿ ಶ್ರೀ ಪೃಥ್ವಿರಾಜ್ ಪಾಟೀಲ ಹಾಗೂ ಸಹಾಯಕ ನಿರ್ದೇಶಕ ಶ್ರೀ ಪಿ.ಎಸ್. ಕಸನಕ್ಕಿ ಅವರು ಕಾಮಗಾರಿಯಲ್ಲಿ ಭಾಗವಹಿಸಿರುವ ಕೂಲಿಕಾರರ ಹಾಜರಾತಿಯನ್ನು ಪರಿಶೀಲಿಸಿದರು. ಹಾಜರಾತಿ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ನಿಗದಿತ ನಿಯಮಗಳನ್ನು ಪಾಲಿಸುವಂತೆ ಸಂಬಂಧಪಟ್ಟವರಿಗೆ ತಿಳಿಸಿದರು.
ಕೂಲಿಕಾರರು ತಮಗೆ ನಿಗದಿಪಡಿಸಿರುವ ಅಳತೆಗೆ ಅನುಗುಣವಾಗಿ ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಕೆಲಸದ ಪ್ರಮಾಣಕ್ಕೆ ತಕ್ಕಂತೆ ಹಾಗೂ ನಿಯಮಾನುಸಾರ ಸಮಾನ ಕೂಲಿ ದೊರೆಯುವಂತಾಗಬೇಕು ಎಂದು ಅಧಿಕಾರಿಗಳು ತಿಳಿಸಿದರು. ಕಾಮಗಾರಿಯ ವೇಳೆ ಕಾರ್ಮಿಕರ ಹಾಜರಾತಿ, ಕೆಲಸದ ಪ್ರಮಾಣ ಮತ್ತು ಗುಣಮಟ್ಟದ ಮೇಲೆ ನಿರಂತರ ನಿಗಾ ವಹಿಸುವಂತೆ ಸೂಚಿಸಲಾಯಿತು.
ಕೆರೆಯ ಹೂಳೆತ್ತುವ ಕಾಮಗಾರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಕರೆತರಲು ಜೆಕೆಎಂಗೆ ಅಧಿಕಾರಿಗಳು ಸೂಚನೆ ನೀಡಿದರು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ, ಗ್ರಾಮದ ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡುವಂತೆ ತಿಳಿಸಿದರು.
ಕೆರೆ ಹೂಳೆತ್ತುವ ಕಾಮಗಾರಿಯಿಂದ ಕೆರೆಯ ನೀರು ಸಂಗ್ರಹ ಸಾಮರ್ಥ್ಯ ಹೆಚ್ಚುವುದರೊಂದಿಗೆ ಕೃಷಿ ಚಟುವಟಿಕೆಗಳು ಹಾಗೂ ಅಂತರ್ಜಲಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ. ಕಾಮಗಾರಿಯನ್ನು ನಿಗದಿತ ಮಾನದಂಡಗಳಂತೆ ತ್ವರಿತವಾಗಿ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳು ಸಂಬಂಧಪಟ್ಟವರಿಗೆ ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande