ಮುಧೋಳ ಸರ್ಕಾರಿ ತಾಲೂಕು ಆಸ್ಪತ್ರೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಭೇಟಿ: ಆರೋಗ್ಯ ಸೇವೆಗಳ ಗುಣಮಟ್ಟ ಪರಿಶೀಲನೆ
ಬಾಗಲಕೋಟೆ, 14 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಇಂದು ಅಕಸ್ಮಿಕವಾಗಿ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಸಮಗ್ರ
Visit


ಬಾಗಲಕೋಟೆ, 14 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರು ಇಂದು ಅಕಸ್ಮಿಕವಾಗಿ ಭೇಟಿ ನೀಡಿ, ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಗೆ ದೊರೆಯುತ್ತಿರುವ ಆರೋಗ್ಯ ಸೇವೆಗಳ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಆಗಮಿಸಿದ ಮಾಜಿ‌ ಶಾಸಕ ವೀರಣ್ಣ ಚರಂತಿಮಠ ಅವರು ವಿವಿಧ ವಾರ್ಡ್ಗಳು, ಚಿಕಿತ್ಸಾ ವಿಭಾಗಗಳು ಹಾಗೂ ಇತರೆ ಅಗತ್ಯ ಸೌಲಭ್ಯಗಳನ್ನು ಖುದ್ದಾಗಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳು, ಅಗತ್ಯ ಔಷಧಿಗಳ ಲಭ್ಯತೆ, ವೈದ್ಯಕೀಯ ಸಿಬ್ಬಂದಿಯ ಸೇವೆ ಹಾಗೂ ವಾರ್ಡ್ಗಳ ಸ್ವಚ್ಛತೆ ಸೇರಿದಂತೆ ಹಲವು ಅಂಶಗಳ ಕುರಿತು ಪರಿಶೀಲನೆ ನಡೆಸಿದರು.

ವಿಶೇಷವಾಗಿ ಬಡವರು ಹಾಗೂ ಗ್ರಾಮೀಣ ಪ್ರದೇಶಗಳಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವೀರಣ್ಣ ಚರಂತಿಮಠ ಅವರು ಅಧಿಕಾರಿಗಳಿಗೆ ಸೂಚಿಸಿದರು. ರೋಗಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ, ಅಗತ್ಯ ಔಷಧಿ ಹಾಗೂ ಸೂಕ್ತ ವೈದ್ಯಕೀಯ ಮಾರ್ಗದರ್ಶನ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಬಳಿಕ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿದ ಅವರು, ಆಸ್ಪತ್ರೆಯಲ್ಲಿನ ಪ್ರಸ್ತುತ ವ್ಯವಸ್ಥೆ, ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಸಾರ್ವಜನಿಕರಿಗೆ ಇನ್ನಷ್ಟು ಉತ್ತಮ ಆರೋಗ್ಯ ಸೇವೆ ಒದಗಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.

“ಆಸ್ಪತ್ರೆಗೆ ಬರುವ ಯಾವುದೇ ರೋಗಿ ಅಥವಾ ಅವರ ಕುಟುಂಬದವರಿಗೆ ಅನಗತ್ಯ ತೊಂದರೆಯಾಗಬಾರದು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ನೀಡಬೇಕು. ಆಸ್ಪತ್ರೆಯ ಸ್ವಚ್ಛತೆ, ಔಷಧಿಗಳ ಲಭ್ಯತೆ ಹಾಗೂ ಚಿಕಿತ್ಸಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು” ಎಂದು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆಗಳು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಪ್ರಮುಖ ಆರೋಗ್ಯ ಆಶ್ರಯವಾಗಿದ್ದು, ಇಲ್ಲಿ ದೊರೆಯುವ ಸೇವೆಗಳು ಜನಸ್ನೇಹಿಯಾಗಿರಬೇಕು. ವೈದ್ಯರು ಮತ್ತು ಸಿಬ್ಬಂದಿ ರೋಗಿಗಳೊಂದಿಗೆ ಮಾನವೀಯತೆಯಿಂದ ವರ್ತಿಸುವುದರ ಜೊತೆಗೆ, ತುರ್ತು ಸಂದರ್ಭಗಳಲ್ಲಿ ಕೂಡಲೇ ಸ್ಪಂದಿಸಬೇಕು ಎಂದು ಅವರು ಹೇಳಿದರು.

ಕ್ಷೇತ್ರದ ಪ್ರತಿಯೊಬ್ಬ ನಾಗರಿಕನ ಆರೋಗ್ಯ ಮತ್ತು ಶ್ರೇಯೋಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಕಾರ್ಯವೈಖರಿಯನ್ನು ನಿರಂತರವಾಗಿ ಪರಿಶೀಲಿಸಲಾಗುವುದು. ಅಗತ್ಯವಿರುವ ಮೂಲಸೌಕರ್ಯ ಹಾಗೂ ಸೌಲಭ್ಯಗಳ ಸುಧಾರಣೆಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ವೀರಣ್ಣ ಚರಂತಿಮಠ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ವೈದ್ಯರು, ವಿವಿಧ ವಿಭಾಗಗಳ ಸಿಬ್ಬಂದಿ ಹಾಗೂ ಆಸ್ಪತ್ರೆಯ ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande