
ಬಾಗಲಕೋಟೆ, 14 ಆಗಸ್ಟ್ (ಹಿ.ಸ.)
ಆ್ಯಂಕರ್ : ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಾಳೆ ನಡೆಯಲಿರುವ ಅದ್ದೂರಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಜ್ಜಾಗುತ್ತಿದ್ದಾರೆ. ನಗರದ ವಿವಿಧ ಶಾಲೆಗಳ ಮಕ್ಕಳು ರನ್ನ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮಗಳಿಗಾಗಿ ಉತ್ಸಾಹದಿಂದ ಪೂರ್ವಾಭ್ಯಾಸ ನಡೆಸಿದರು.
ನಾಳೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣದ ಬಳಿಕ ಕವಾಯತು, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ದೇಶಭಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ರನ್ನ ಕ್ರೀಡಾಂಗಣದಲ್ಲಿ ತರಬೇತಿ ಪಡೆದು, ಕಾರ್ಯಕ್ರಮದ ಯಶಸ್ಸಿಗೆ ಸಿದ್ಧತೆ ಮಾಡಿಕೊಂಡರು.
ವಿವಿಧ ಶಾಲೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಪಥಸಂಚಲನ ಹಾಗೂ ಕವಾಯತಿನ ಹೆಜ್ಜೆಗಳನ್ನು ಹಾಕುವ ಮೂಲಕ ಪೂರ್ವಾಭ್ಯಾಸ ನಡೆಸಿದರು.
ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಶಿಸ್ತು ಹಾಗೂ ರಾಷ್ಟ್ರಪ್ರೇಮದ ಭಾವನೆ ಮೂಡಿಸುವ ನಿಟ್ಟಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಪ್ರತಿಯೊಂದು ಚಟುವಟಿಕೆಯಲ್ಲೂ ಮಾರ್ಗದರ್ಶನ ನೀಡಿದರು.
ಕವಾಯತು ವೇಳೆ ಹೆಜ್ಜೆ ಹೊಂದಾಣಿಕೆ, ಸಾಲಿನ ಶಿಸ್ತು, ತಾಳಮೇಳ ಹಾಗೂ ಪಥಸಂಚಲನದ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ಶಿಕ್ಷಕರು ವಿವರಿಸಿದರು.
ಇದೇ ವೇಳೆ ನಾಳಿನ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಮಕ್ಕಳಿಗೆ ಹಲವು ಬಾರಿ ಅಭ್ಯಾಸ ಮಾಡಿಸಲಾಯಿತು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ರನ್ನ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನಗಳನ್ನು ಸ್ಮರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಕ್ಕಳು ಉತ್ಸಾಹದಿಂದ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಮುಖ್ಯೋಪಾಧ್ಯಾಯ ರವಿ ಮಮದಾಪೂರ ತಿಳಿಸಿದರು.
ಆಯಾ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳ ಪೂರ್ವಾಭ್ಯಾಸದ ಮೇಲ್ವಿಚಾರಣೆ ನಡೆಸಿ, ನಾಳಿನ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಸೂಚನೆಗಳನ್ನು ನೀಡಿದರು. ವಿದ್ಯಾರ್ಥಿಗಳ ಶಿಸ್ತುಬದ್ಧ ಪೂರ್ವಾಭ್ಯಾಸವು ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ನಿರೀಕ್ಷೆ ಮೂಡಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande