
ಬಾಗಲಕೋಟೆ, 15 ಆಗಸ್ಟ್ (ಹಿ.ಸ.)
ಆ್ಯಂಕರ್ : 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬಾಗಲಕೋಟೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿದ್ಧಾರ್ಥ ಗೋಯಲ್, ಐ.ಪಿ.ಎಸ್. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸಲ್ಲಿಸಿದರು.
ಬಳಿಕ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಜೀವನವನ್ನೇ ದೇಶಕ್ಕಾಗಿ ಮುಡಿಪಾಗಿಟ್ಟು ನಮಗೆ ಸ್ವಾತಂತ್ರ್ಯ ದೊರಕಿಸಿಕೊಟ್ಟಿದ್ದಾರೆ. ಅವರ ಆದರ್ಶ, ಶಿಸ್ತು, ದೇಶಭಕ್ತಿ ಮತ್ತು ತ್ಯಾಗದ ಮನೋಭಾವವನ್ನು ಪೊಲೀಸ್ ಇಲಾಖೆಯ ಪ್ರತಿಯೊಬ್ಬರೂ ತಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪೊಲೀಸ್ ಇಲಾಖೆಯು ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಜವಾಬ್ದಾರಿ ಹೊಂದಿದೆ.
ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಂಡು, ಅವರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಕಾನೂನಿನ ಚೌಕಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಜನರಲ್ಲಿ ಇಲಾಖೆಯ ಮೇಲಿನ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಿದ್ಧಾರ್ಥ ಗೋಯಲ್ ಅವರು ಸಿಬ್ಬಂದಿಗೆ ತಿಳಿಸಿದರು.
ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಮಹತ್ವದ್ದಾಗಿದ್ದು, ಪೊಲೀಸ್ ಸಿಬ್ಬಂದಿ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಶಿಸ್ತಿನಿಂದ ಸಾರ್ವಜನಿಕ ಸೇವೆ ಸಲ್ಲಿಸುವ ಮೂಲಕ ದೇಶಸೇವೆಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಬಾಗಲಕೋಟೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್, ಕೆ.ಎಸ್.ಪಿ.ಎಸ್. ಸೇರಿದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಲಿಪಿಕ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು, ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande