
ಬಾಗಲಕೋಟೆ, 15 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ನಗರದ ಶಿವಾನಂದ ಜೀನ್ನಲ್ಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು.
ಭಾರತೀಯ ಜನತಾ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ ಅವರು ಭಾಗವಹಿಸಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ವೀರರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.
ಸ್ವಾತಂತ್ರ್ಯವು ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ನಿರಂತರ ಹೋರಾಟದ ಫಲವಾಗಿದೆ. ದೇಶದ ಏಕತೆ, ಅಖಂಡತೆ ಹಾಗೂ ಸಾರ್ವಭೌಮತೆಯನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸ್ವಾತಂತ್ರ್ಯದ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದರ ಜೊತೆಗೆ, ರಾಷ್ಟ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಪಾಲಿಸುವ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕೆಂದು ಮುಖಂಡರು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ. ಎಂ.ಎಸ್. ದಡ್ಡೆನ್ನವರ, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಸವರಾಜ ಯಂಕಂಚಿ, ರಾಜು ರೇವಣಕರ್, ಸತ್ಯನಾರಾಯಣ ಹೇಮಾದ್ರಿ, ಸುರೇಶ ಕೊಣ್ಣೂರ, ಬಸವರಾಜ ಹುನಗುಂದ, ಕಲ್ಲಪ್ಪ ಭಗವತಿ, ಉಮೇಶ ಹಂಚಿನಾಳ, ಶೋಭಾ ರಾವ್, ಶಶಿಕಲಾ ಮಜ್ಜಗಿ, ಭಾಗೀರಥಿ ಪಾಟೀಲ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande