
ಕೋಲಾರ, ೧೬,ಆಗಸ್ಟ್ (ಹಿ.ಸ):
ಆ್ಯಂಕರ್ : ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಗಣನೀಯವಾಗಿ ಕಡಿಮೆಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಶಾಲೆಗಳು ಮುಚ್ಚುವ ಸ್ಥಿತಿಗೆ ತಲುಪಿವೆ. ಶಾಲೆಗಳು ಕೇವಲ ಕಲಿಯುವ ಜಾಗವಲ್ಲ, ಬದಲಿಗೆ ಹಳೆ ವಿದ್ಯಾರ್ಥಿಗಳ ಬಾಲ್ಯದ ನೆನಪುಗಳ ತವರೂರು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರ ಮುಂದಾಗುವಂತೆ ಸುವರ್ಣಭೂಮಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಲಾ ಸಂಘದ ಅಧ್ಯಕ್ಷ ಕುಡುವನಹಳ್ಳಿ ಗಣೇಶಪ್ಪ ಒತ್ತಾಯಿಸಿದ್ದಾರೆ.
ಎಂಬತ್ತನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕುಡುವನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸಾಮಗ್ರಿಗಳು ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಹಿಂದಿನ ದಿನಗಳಲ್ಲಿ ಸಾಹಿತಿಗಳು, ರಾಜಕಾರಣಿಗಳು ಹಾಗೂ ಉನ್ನತ ಅಧಿಕಾರಿಗಳು ವ್ಯಾಸಮಗ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ವ್ಯಾಮೋಹದಿಂದ ಪೋಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಿಲ್ಲ. ಒಂದು ವೇಳೆ ಶಾಲೆಗಳೇ ಇಲ್ಲವಾದರೆ ಮುಂದಿನ ಪೀಳಿಗೆಗೆ ನಮ್ಮ ಹಳೇ ನೆನಪುಗಳ ಮೂಲವೇ ಇಲ್ಲದಂತಾಗುತ್ತದೆ. ಆದ್ದರಿಂದ ಗ್ರಾಮದ ಮುಖಂಡರು ಮತ್ತು ಹಿರಿಯರು ಎಲ್ಲರೂ ಸೇರಿ ಸಭೆ ನಡೆಸಿ, ಪೋಷಕರಲ್ಲಿ ಅರಿವು ಮೂಡಿಸಿ ತಮ್ಮ ಮಕ್ಕಳನ್ನು ಸಮೀಪದ ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಶಾಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಮನವಿ ಮಾಡಿದರು.
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಮುಂದಾಗಬೇಕಾದ ಅನಿವಾರ್ಯತೆ ಕುರಿತು ಕುಡುವನಹಳ್ಳಿ ಗ್ರಾಮದಲ್ಲಿ ವಿಶೇಷ ಜಾಗೃತಿ ಮೂಡಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಸುವರ್ಣಭೂಮಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಲಾ ಸಂಘದವರು ನೀಡಿರುವ ಕ್ರೀಡಾ ಸಾಮಗ್ರಿಗಳು ಹಾಗೂ ಶೈಕ್ಷಣಿಕ ಪರಿಕರಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮೂಡಿಸಿವೆ. ಸಮುದಾಯದ ಇಂತಹ ಸಹಕಾರದಿಂದ ಶಾಲೆಯ ಅಭಿವೃದ್ಧಿ ಹಾಗೂ ದಾಖಲಾತಿ ಹೆಚ್ಚಳಕ್ಕೆ ಹೆಚ್ಚಿನ ಬಲ ಸಿಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ಶ್ರೀರಾಮೇಗೌಡ, ಗಂಗಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ್, ಯುವ ಮುಖಂಡರಾದ ಅರುಣ್ ಕುಮಾರ್, ಪಿಳ್ಳೇಗೌಡ ಹಾಗೂ ಅಂಗನವಾಡಿ ಶಿಕ್ಷಕಿ ಗಾಯತ್ರಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್