
ಗದಗ, 17 ಆಗಸ್ಟ್ (ಹಿ.ಸ.)
ಆ್ಯಂಕರ್:- ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಯಾವುದೇ ಅರ್ಹರು ಯೋಜನೆಯಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವುದರ ಜೊತೆಗೆ, ಅನರ್ಹರು ಹಾಗೂ ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಸೌಲಭ್ಯ ಮುಂದುವರಿದಿರುವ ಕುರಿತು ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ರೋಣ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಗದಗ ಜಿಲ್ಲೆ ರೋಣ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿಗೆ ಆರ್ಥಿಕ ನೆರವಾಗುವ ಉದ್ದೇಶ ಹೊಂದಿವೆ. ಹೀಗಾಗಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಇಲಾಖಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆ: 34,528 ಅರ್ಜಿಗಳಿಗೆ ಮಂಜೂರಾತಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ರೋಣ ತಾಲೂಕಿನಲ್ಲಿ ಒಟ್ಟು 38,422 ಪಡಿತರ ಚೀಟಿಗಳಿದ್ದು, ಈ ಪೈಕಿ 38,278 ಅರ್ಜಿಗಳು ನೋಂದಣಿಯಾಗಿವೆ. ಒಟ್ಟು 34,528 ಅರ್ಜಿಗಳಿಗೆ ಮಂಜೂರಾತಿ ದೊರೆತಿದ್ದು, ಶೇ.90.20ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಮನೆಮನೆಗೆ ತೆರಳಿ ನಡೆಸಿದ ಪರಿಶೀಲನೆಯಲ್ಲಿ ಗೃಹಲಕ್ಷ್ಮೀ ಯೋಜನೆಯ 945 ಫಲಾನುಭವಿಗಳು ಮೃತಪಟ್ಟಿರುವುದು ಹಾಗೂ 248 ಮಂದಿ ಜಿಎಸ್ಟಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ಮೃತಪಟ್ಟ ಫಲಾನುಭವಿಗಳ ಹೆಸರಿನಲ್ಲಿ ಯೋಜನೆಯ ಸೌಲಭ್ಯ ಮುಂದುವರಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷರು ಸೂಚಿಸಿದರು.
ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿ ಮೃತಪಟ್ಟಿದ್ದರೆ, ಕುಟುಂಬದ ಸದಸ್ಯರ ವಿವರಗಳನ್ನು ನಿಯಮಾನುಸಾರ ತಿದ್ದುಪಡಿ ಮಾಡಿಸಲು ಆಹಾರ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಅರ್ಹ ಕುಟುಂಬಗಳು ಯಾವುದೇ ಕಾರಣಕ್ಕೂ ಯೋಜನೆಯಿಂದ ಹೊರಗುಳಿಯದಂತೆ ನಿರಂತರ ಪರಿಶೀಲನೆ ನಡೆಸಬೇಕು ಎಂದು ಮಿಥುನ್ ಜಿ. ಪಾಟೀಲ ಹೇಳಿದರು.
ಗೃಹಲಕ್ಷ್ಮೀ ಯೋಜನೆಯ ಕಂತು ಫಲಾನುಭವಿಗಳ ಖಾತೆಗೆ ಜಮೆಯಾಗುವ ಮುನ್ನವೇ ಸಾರ್ವಜನಿಕರಿಗೆ ಸಾಮಾಜಿಕ ಜಾಲತಾಣ ಹಾಗೂ ವಿವಿಧ ಪ್ರಚಾರ ಮಾಧ್ಯಮಗಳ ಮೂಲಕ ಮಾಹಿತಿ ನೀಡಬೇಕು. ಇದರಿಂದ ಫಲಾನುಭವಿಗಳಲ್ಲಿ ಗೊಂದಲ ಉಂಟಾಗುವುದನ್ನು ತಪ್ಪಿಸಬಹುದು ಎಂದು ಅವರು ತಿಳಿಸಿದರು.
ಅನ್ನಭಾಗ್ಯ ನ್ಯಾಯಬೆಲೆ ಅಂಗಡಿಗಳಲ್ಲಿ ನಿಯಮ ಪಾಲನೆಗೆ ಸೂಚನೆ
ಅನ್ನಭಾಗ್ಯ ಯೋಜನೆಯಡಿ ನ್ಯಾಯಬೆಲೆ ಅಂಗಡಿಗಳಲ್ಲಿ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ 12 ನಿಯಮಗಳ ಬ್ಯಾನರ್ ಅಳವಡಿಸುವಂತೆ ಹಿಂದಿನ ಸಭೆಯಲ್ಲಿ ಸೂಚನೆ ನೀಡಿದ್ದರೂ, ಇನ್ನೂ ಎಲ್ಲೆಡೆ ಅನುಷ್ಠಾನವಾಗದಿರುವುದಕ್ಕೆ ಅಧ್ಯಕ್ಷರು ಅಸಮಾಧಾನ ವ್ಯಕ್ತಪಡಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ಕಾರದ ನಿಯಮಗಳು ಹಾಗೂ ಫಲಾನುಭವಿಗಳಿಗೆ ದೊರೆಯುವ ಪಡಿತರ ಪ್ರಮಾಣದ ಕುರಿತು ಸ್ಪಷ್ಟ ಮಾಹಿತಿ ಇರುವಂತೆ ನೋಡಿಕೊಳ್ಳಬೇಕು. 75 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಹೆಬ್ಬೆಟ್ಟು ಗುರುತಿನ ತಾಂತ್ರಿಕ ಸಮಸ್ಯೆ ಎದುರಾದ ಸಂದರ್ಭದಲ್ಲಿ ಒಟಿಪಿ ಮೂಲಕ ಪಡಿತರ ಪಡೆಯಲು ಅವಕಾಶವಿದ್ದು, ಈ ಕುರಿತು ವೃದ್ಧರು ಹಾಗೂ ಅವರ ಕುಟುಂಬದವರಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಪ್ರತಿ ತಿಂಗಳು 25ರ ನಂತರವೇ ಪಡಿತರ ವಿತರಣೆ ಆರಂಭವಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಮಿತಿ ಸದಸ್ಯ ಬಿ.ಎಸ್. ರಡ್ಡೇರ ಸಭೆಯ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಗೋದಾಮಿನಿಂದ ಪಡಿತರ ಎತ್ತುವಳಿ ತಡವಾಗುತ್ತಿರುವುದರಿಂದ ವಿತರಣೆಯಲ್ಲಿ ವಿಳಂಬವಾಗುತ್ತಿದೆ. ಪಡಿತರ ಎತ್ತುವಳಿ ಮಾಡಿದ ಮರುದಿನವೇ ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಣೆ ಆರಂಭಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲಾಗುತ್ತಿದೆ. ಅಂತ್ಯೋದಯ ಕಾರ್ಡ್ದಾರರಿಗೆ 42 ಕೆಜಿ ಜೋಳ ಹಾಗೂ 28 ಕೆಜಿ ಅಕ್ಕಿ ಮತ್ತು ಬಿಪಿಎಲ್ ಕಾರ್ಡ್ದಾರರಿಗೆ 10 ಕೆಜಿ ಅಕ್ಕಿ ಹಾಗೂ 3 ಕೆಜಿ ಜೋಳ ವಿತರಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಗೃಹಜ್ಯೋತಿ: ಮರು ಸಮೀಕ್ಷೆ ಶೇ.86ರಷ್ಟು ಪೂರ್ಣ
ಹೆಸ್ಕಾಂ ವ್ಯಾಪ್ತಿಯಲ್ಲಿ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಸಮೀಕ್ಷೆ ಕಾರ್ಯ ಶೇ.86ರಷ್ಟು ಪೂರ್ಣಗೊಂಡಿದೆ ಎಂದು ಸಭೆಗೆ ತಿಳಿಸಲಾಯಿತು. ಉಳಿದ ಫಲಾನುಭವಿಗಳ ಸಮೀಕ್ಷೆಯನ್ನು ಮನೆಮನೆಗೆ ತೆರಳಿ ತ್ವರಿತವಾಗಿ ಪೂರ್ಣಗೊಳಿಸುವಂತೆ ಸಮಿತಿ ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.
ಯೋಜನೆಯಿಂದ ಅರ್ಹ ಫಲಾನುಭವಿಗಳ ಹೆಸರು ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು. ಫಲಾನುಭವಿಗಳ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದರು.
ವಿದ್ಯುತ್ ಸಲಹಾ ಸಮಿತಿ ಸಭೆಗಳ ಕುರಿತು ಸಮಿತಿ ಸದಸ್ಯರಿಗೆ ಸಮರ್ಪಕ ಮಾಹಿತಿ ನೀಡುತ್ತಿಲ್ಲ ಎಂದು ಸದಸ್ಯ ಶಿವಪ್ಪ ಗಾಣಿಗೇರ ಆಕ್ಷೇಪ ವ್ಯಕ್ತಪಡಿಸಿದರು. ಸಾರ್ವಜನಿಕರು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳನ್ನು ಇಲಾಖೆಯ ಗಮನಕ್ಕೆ ತಂದು ಪರಿಹರಿಸಲು ವಿದ್ಯುತ್ ಸಲಹಾ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಶಕ್ತಿ ಯೋಜನೆ: ಹೆಚ್ಚುವರಿ ಬಸ್ಗಳಿಗೆ ಒತ್ತಾಯ
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆಯಲ್ಲಿ ರೋಣ ತಾಲೂಕಿನ ವಿವಿಧ ಗ್ರಾಮೀಣ ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬಸ್ ಸೇವೆಗಳನ್ನು ಮತ್ತಷ್ಟು ಸುಧಾರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.
ರೋಣ–ಅಬ್ಬಿಗೇರಿ ಮಾರ್ಗದಲ್ಲಿ ಬೆಳಗ್ಗೆ 6 ಗಂಟೆಗೆ ಹಾಗೂ ಸಂಜೆ 5.30ಕ್ಕೆ ಬಸ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ರೋಣ–ಸವಡಿ ಮಾರ್ಗವಾಗಿ ಗದಗಕ್ಕೆ ತೆರಳುವ ಬಸ್ಗಳಲ್ಲಿ ಹೆಚ್ಚಿನ ಜನದಟ್ಟಣೆ ಕಂಡುಬರುತ್ತಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ಸದಸ್ಯ ಬಸವರಾಜ ತಳವಾರ ಮನವಿ ಮಾಡಿದರು.
ರೋಣ–ಹೊಸಳ್ಳಿ–ಇಟಗಿ ಮಾರ್ಗದ ಬಸ್ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವುದರಿಂದ ಶಾಲಾ ಸಮಯದಲ್ಲಿ ನಿಗದಿತ ಸ್ಥಳಗಳಲ್ಲಿ ಬಸ್ ನಿಲ್ಲಿಸುವ ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿಗಳು ಬಸ್ಗಾಗಿ ದೂರದವರೆಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಬಿ.ಎಸ್. ರಡ್ಡೇರ ತಿಳಿಸಿದರು.
ಇಟಗಿ ಮಾರ್ಗದಲ್ಲಿ ಸಂಚರಿಸುವ ಬಸ್ಗಳ ಚಾಲಕರು ಹಾಗೂ ನಿರ್ವಾಹಕರಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸೂಕ್ತ ಸೂಚನೆ ನೀಡುವಂತೆ ಅಧ್ಯಕ್ಷ ಮಿಥುನ್ ಜಿ. ಪಾಟೀಲ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಹಿಳಾ ಪ್ರಯಾಣಿಕರ ಸಮಸ್ಯೆಗೂ ಸ್ಪಂದನೆ
ಮಹಿಳಾ ಪ್ರಯಾಣಿಕರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದರೂ ಕೆಲವೆಡೆ ಬಸ್ಗಳನ್ನು ನಿಲ್ಲಿಸದೆ ತೆರಳುತ್ತಿರುವ ಘಟನೆಗಳ ಕುರಿತು ಸಮಿತಿ ಸದಸ್ಯೆ ನಾಜಬೇಗಂ ಯಲಿಗಾರ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಪ್ರಯಾಣಿಕರ ಸುರಕ್ಷತೆ ಹಾಗೂ ಅನುಕೂಲಕ್ಕೆ ಆದ್ಯತೆ ನೀಡಬೇಕು. ಮಹಿಳೆಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಪ್ರಯಾಣಿಕರಿಗೂ ಸಮರ್ಪಕ ಸೇವೆ ಒದಗಿಸುವುದು ಸಾರಿಗೆ ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಈ ಕುರಿತು ಎಲ್ಲ ಚಾಲಕರು ಹಾಗೂ ನಿರ್ವಾಹಕರ ಸಭೆ ನಡೆಸಿ, ಬಸ್ ನಿಲುಗಡೆ ಹಾಗೂ ಪ್ರಯಾಣಿಕರೊಂದಿಗೆ ನಡೆದುಕೊಳ್ಳುವ ಕುರಿತು ಸೂಕ್ತ ತಿಳುವಳಿಕೆ ನೀಡುವಂತೆ ಮಿಥುನ್ ಜಿ. ಪಾಟೀಲ ಸೂಚಿಸಿದರು.
ಇದರ ಜೊತೆಗೆ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಘಟಕ ನಿರ್ವಾಹಕರಿಗೆ ನಿರ್ದೇಶನ ನೀಡಿದರು.
ಅರ್ಹರಿಗೆ ಸೌಲಭ್ಯ, ಅನರ್ಹರ ವಿರುದ್ಧ ಕ್ರಮ
ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೇರವಾಗಿ ತಲುಪುವಂತೆ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಾಗಿರುವ ಕುಟುಂಬಗಳ ಮಾಹಿತಿ ಸಂಗ್ರಹಿಸಿ, ದಾಖಲೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಸಹಕರಿಸಬೇಕು. ಅದೇ ಸಂದರ್ಭದಲ್ಲಿ ಅನರ್ಹರು ಅಥವಾ ಮೃತಪಟ್ಟವರ ಹೆಸರಿನಲ್ಲಿ ಸೌಲಭ್ಯ ಪಡೆಯುತ್ತಿರುವ ಪ್ರಕರಣಗಳನ್ನು ಪತ್ತೆಹಚ್ಚಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಇರುವ ಗೊಂದಲ ನಿವಾರಿಸಲು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಫಲಾನುಭವಿಗಳಿಗೆ ಯೋಜನೆಗಳ ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಸೌಲಭ್ಯ ಪಡೆಯುವ ವಿಧಾನ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರಿಗೆ ಇಲಾಖೆ ಸಿಬ್ಬಂದಿ, ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಂಬಂಧಿಸಿದ ಇಲಾಖೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP