
ವಿಜಯಪುರ, 17 ಆಗಸ್ಟ್ (ಹಿ.ಸ.)
ಆ್ಯಂಕರ್ : ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಸರ್ಕಾರದ ಆದೇಶದಂತೆ ಉದ್ಯೋಗಾಕಾಂಕ್ಷಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಎಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಹಾಗೂ ಎಐಡಿವಾಒ ನೇತೃತ್ವದಲ್ಲಿ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ನೀಡುವಂತೆ ಒತ್ತಾಯಿಸಲಾಯಿತು.
ರಾಜ್ಯದಲ್ಲಿ ಸಾವಿರಾರು ಯುವಜನರು ಶಿಕ್ಷಕರ ನೇಮಕಾತಿಗಾಗಿ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದು, ವಿವಿಧ ಕಾರಣಗಳಿಂದಾಗಿ ನೇಮಕಾತಿ ಪ್ರಕ್ರಿಯೆಯಿಂದ ಅವಕಾಶ ವಂಚಿತರಾಗುವ ಪರಿಸ್ಥಿತಿ ಎದುರಾಗಿದೆ. ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದರೆ, ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ದಸ್ತಗಿರಿ ಮಕನಾದರ್, 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಸರ್ಕಾರದ ಆದೇಶದಂತೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಉದ್ಯೋಗಾಕಾಂಕ್ಷಿಗಳ ನ್ಯಾಯಯುತ ಬೇಡಿಕೆಯನ್ನು ಸರ್ಕಾರ ನಿರ್ಲಕ್ಷಿಸಬಾರದು. ವಯೋಮಿತಿ ಸಡಿಲಿಕೆ ಕುರಿತು ಕೂಡಲೇ ಸೂಕ್ತ ಕ್ರಮ ಕೈಗೊಂಡು, ನೇಮಕಾತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸಂಖ್ಯೆಯ ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಯುವಜನರ ಉದ್ಯೋಗದ ವಿಚಾರದಲ್ಲಿ ಸರ್ಕಾರ ವಿಳಂಬ ಧೋರಣೆ ಅನುಸರಿಸಿದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಸರ್ಕಾರ ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ನಡೆಸಲಾಗುವುದು ಎಂದು ದಸ್ತಗಿರಿ ಮಕನಾದರ್ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವುದರ ಮೂಲಕ ಎಚ್ಚರಿಕೆ ನೀಡಿದರು.
ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ನೀಡುವ ಮೂಲಕ ವರ್ಷಗಳಿಂದ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ನ್ಯಾಯ ಒದಗಿಸಬೇಕು. ಶಿಕ್ಷಣ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಅಭ್ಯರ್ಥಿಗಳಿಗೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣವೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿಯಲ್ಲಿ ಒತ್ತಾಯಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande