
ಬಾಗಲಕೋಟೆ, 18 ಆಗಸ್ಟ್ (ಹಿ.ಸ.)
ಆ್ಯಂಕರ್ : 68 ಹಳ್ಳಿಗಳನ್ನು ಹೊಂದಿರುವ
ಬಾಗಲಕೋಟೆ ಜಿಲ್ಲೆಯ ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 80 ಸಾರಾಯಿ ಅಂಗಡಿಗಳು ತೆರೆಯಲು ಅವಕಾಶ ನೀಡಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು ಸಂಸದ ಗೋವಿಂದ ಕಾರಜೋಳ ಕಾಂಗ್ರೆಸ್ ಆಡಳಿತದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಧೋಳ ನಗರದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಯನ್ನು ವ್ಯಂಗ್ಯವಾಗಿ ಟೀಕಿಸಿದರು. ಗ್ರಾಮೀಣ ಭಾಗದ ಜನರು ಸಾರಾಯಿ ಖರೀದಿಸಲು ಪಟ್ಟಣಗಳಿಗೆ ತೆರಳುವುದು ಕಷ್ಟವಾಗಬಾರದು ಎಂಬ ಮನೋಭಾವದಿಂದ ಪ್ರತಿಯೊಂದು ಹಳ್ಳಿಗೂ ಸಾರಾಯಿ ಅಂಗಡಿ ತೆರೆಯುವ ಮೂಲಕ ಸರ್ಕಾರ ದೊಡ್ಡ ಸಾಧನೆ ಮಾಡಿದೆ ಎಂದು ವ್ಯಂಗ್ಯವಾಡಿದರು.
ಹಾಲು-ಮೊಸರು ಸುಲಭವಾಗಿ ಸಿಗುವುದಕ್ಕಿಂತಲೂ ಸಾರಾಯಿ ಸುಲಭವಾಗಿ ದೊರೆಯುವಂತಹ ಪರಿಸ್ಥಿತಿಯನ್ನು ನಿರ್ಮಿಸಿರುವುದು ಕಾಂಗ್ರೆಸ್ ಸರ್ಕಾರದ ಸಾಧನೆಯೇ ಎಂದು ಪ್ರಶ್ನಿಸಿದ ಅವರು, ಜನರ ಜೀವನಮಟ್ಟ ಸುಧಾರಣೆ, ಉದ್ಯೋಗ ಸೃಷ್ಟಿ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಮದ್ಯದ ಅಂಗಡಿಗಳ ವಿಸ್ತರಣೆಗೆ ಅವಕಾಶ ನೀಡುತ್ತಿರುವುದು ಎಷ್ಟು ಸಮಂಜಸ ಎಂದು ಟೀಕಿಸಿದರು.
ಮುಧೋಳ ಕ್ಷೇತ್ರದಲ್ಲಿ ಇತ್ತೀಚಿನ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿರುವ ಕುರಿತು ಆತ್ಮಾವಲೋಕನದ ಅಗತ್ಯವಿದೆ ಎಂದು ಕಾರಜೋಳ ಹೇಳಿದರು. ಚುನಾವಣೆಯಲ್ಲಿ ನಮ್ಮ ಅತಿಯಾದ ಆತ್ಮವಿಶ್ವಾಸದಿಂದಾಗಿ ಕೆಲವೆಡೆ ಎಡವಟ್ಟುಗಳಾಗಿದ್ದು, ಅದರ ಪರಿಣಾಮ ಸೋಲು ಎದುರಿಸಬೇಕಾಯಿತು. ಆ ವಿಚಾರ ಈಗ ಮುಗಿದ ಅಧ್ಯಾಯವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಪ್ರಮಾದಗಳು ಮರುಕಳಿಸದಂತೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.
ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಬಿಜೆಪಿ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಚುನಾವಣೆಯ ಸೋಲಿನಿಂದ ಕಾರ್ಯಕರ್ತರು ಧೈರ್ಯ ಕಳೆದುಕೊಳ್ಳಬಾರದು. ಸೋಲು-ಗೆಲುವು ರಾಜಕೀಯದಲ್ಲಿ ಸಹಜ. ಹಿಂದಿನ ಅನುಭವಗಳಿಂದ ಪಾಠ ಕಲಿತು ಸಂಘಟನೆಯನ್ನು ಬಲಪಡಿಸುವ ಮೂಲಕ ಮುಂದಿನ ಹೋರಾಟಗಳಿಗೆ ಸಜ್ಜಾಗಬೇಕು ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
ಸಭೆಯಲ್ಲಿ ಬಿಜೆಪಿ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಪಕ್ಷದ ಸಂಘಟನೆ ಮತ್ತು ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande