
ಬೆಂಗಳೂರು, 18 ಆಗಸ್ಟ್ (ಹಿ.ಸ.):
ಆ್ಯಂಕರ್:ಒಕ್ಕೂಟ ವ್ಯವಸ್ಥೆಯಲ್ಲಿ ಯಾವುದೇ ರಾಜ್ಯವೂ ಮತ್ತೊಂದು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಚಾಮರಾಜನಗರ ಕಾವೇರಿ ವನ್ಯಜೀವಿ ವಲಯದ ಹನೂರು ಶೂಟೌಟ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂಬ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳಿರುತ್ತವೆ. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ನಮಗೆ ತಿಳಿದಿದೆ. ಅವರು ತಮ್ಮ ಕೆಲಸ ಮಾಡಲಿ, ನಾವು ನಮ್ಮ ಕೆಲಸ ಮಾಡುತ್ತೇವೆ ಎಂದರು.
ತಮಿಳುನಾಡಿನ ಆಡಳಿತದಲ್ಲಿ ತಾವು ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಅದೇ ರೀತಿ ನಮ್ಮ ರಾಜ್ಯದ ವಿಚಾರದಲ್ಲೂ ಇತರರು ಹಸ್ತಕ್ಷೇಪ ಮಾಡಬಾರದು. ರಾಜ್ಯದ ಪಾವಿತ್ರ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದರು.
ಹನೂರು ಪ್ರಕರಣದ ತನಿಖೆ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿರುವ ಹೇಳಿಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇದು ಸಾಮಾನ್ಯ ಚರ್ಚೆಯಾಗಿದ್ದು, ಅವರು ತಮ್ಮ ಕೆಲಸ ಮಾಡಬೇಕು, ನಾವು ನಮ್ಮ ಕೆಲಸ ಮಾಡಬೇಕು ಎಂದು ತಿಳಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.