
ವಿಜಯಪುರ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ಮಹತ್ವದ ಹೆಜ್ಜೆಯಾಗಿರುವ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಶೀಘ್ರದಲ್ಲೇ ಬೃಹತ್ ಉದ್ದಿಮೆಗಳು ಸ್ಥಾಪನೆಯಾಗುವ ನಿರೀಕ್ಷೆ ಮೂಡಿದೆ.
2009ರಲ್ಲಿ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡು ಸುಮಾರು 3 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗಾಗಿ ಬಳಸಿಕೊಳ್ಳಲಾಗಿದ್ದರೂ, ಇದುವರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಬೃಹತ್ ಕೈಗಾರಿಕೆಗಳು ಆರಂಭವಾಗಿರಲಿಲ್ಲ. ಇದೀಗ ಸರಕಾರದ ನಿರಂತರ ಪ್ರಯತ್ನಗಳ ಫಲವಾಗಿ ಹಲವು ಕಂಪನಿಗಳು ಇಲ್ಲಿ ಉದ್ದಿಮೆ ಸ್ಥಾಪಿಸಲು ಆಸಕ್ತಿ ತೋರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆಗಳು ಆರಂಭಗೊಂಡಲ್ಲಿ ವಿಜಯಪುರ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ದೊರೆಯುವುದಲ್ಲದೆ, ಸ್ಥಳೀಯ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಕೈಗಾರಿಕೆಗಳ ಸ್ಥಾಪನೆಯೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಮೂಲಸೌಕರ್ಯ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಪೂರಕವಾಗುವಂತಹ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ.
ಮುಳವಾಡ–ಮಲಘಾಣ ಭಾಗದ ರೈತರು ಕೈಗಾರಿಕಾ ಪ್ರದೇಶಕ್ಕಾಗಿ ತಮ್ಮ ಭೂಮಿಯನ್ನು ನೀಡಿದ್ದು, ಅವರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭೂಮಿ ನೀಡಿದ ರೈತರ ಬೇಡಿಕೆಗಳನ್ನು ಅಧಿಕಾರಿಗಳು ಆಲಿಸಿದರು.
ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ
ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ದೊಡ್ಡ ಪ್ರಮಾಣದ ಭೂಮಿ ಲಭ್ಯವಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಹೊಸ ಉದ್ದಿಮೆಗಳು ಆಗಮಿಸಿದಂತೆ ನೇರ ಹಾಗೂ ಪರೋಕ್ಷ ಉದ್ಯೋಗಾವಕಾಶಗಳು ಹೆಚ್ಚಲಿದ್ದು, ಸಾರಿಗೆ, ವಸತಿ, ವ್ಯಾಪಾರ, ಸೇವಾ ವಲಯ ಸೇರಿದಂತೆ ಹಲವು ಕ್ಷೇತ್ರಗಳಿಗೂ ಚೇತರಿಕೆ ದೊರೆಯಲಿದೆ.
ಇದರೊಂದಿಗೆ ಸುತ್ತಮುತ್ತಲಿನ ಗ್ರಾಮಗಳ ಆರ್ಥಿಕ ಚಟುವಟಿಕೆಗಳು ವೃದ್ಧಿಯಾಗಲಿದ್ದು, ಸ್ಥಳೀಯರಿಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳು ಹೆಚ್ಚಾಗುವ ಸಾಧ್ಯತೆಯಿದೆ. ಕೈಗಾರಿಕೆಗಳ CSR ನಿಧಿಯ ಮೂಲಕ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಪರಿಸರ ಸಂರಕ್ಷಣೆ ಸೇರಿದಂತೆ ಗ್ರಾಮೀಣ ಪ್ರದೇಶದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ ದೊರೆಯಲಿದೆ.
ವಿಜಯಪುರ ಜಿಲ್ಲೆಯನ್ನು ಕೈಗಾರಿಕಾ ನಕ್ಷೆಯಲ್ಲಿ ಪ್ರಮುಖ ಸ್ಥಾನಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಕೈಗಾರಿಕೆಗಳನ್ನು ಆಕರ್ಷಿಸಲು ನಿರಂತರ ಪ್ರಯತ್ನ ನಡೆಸಲಾಗುತ್ತಿದೆ. ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಉದ್ದಿಮೆಗಳು ಕಾರ್ಯಾರಂಭ ಮಾಡುವ ಮೂಲಕ ಹಲವು ವರ್ಷಗಳ ನಿರೀಕ್ಷೆಗೆ ತೆರೆ ಬೀಳುವ ಆಶಾಭಾವನೆ ಮೂಡಿದೆ ಎಂದು ಸಚಿವ ಎಂ.ಬಿ. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande