
ಗದಗ, 19 ಆಗಸ್ಟ್ (ಹಿ.ಸ.)
ಆ್ಯಂಕರ್:- ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಆಗಸ್ಟ್ 28ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರು ಹಾಗೂ ಸಾರ್ವಜನಿಕರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು. ಜಿಲ್ಲಾಮಟ್ಟದ ಕಾರ್ಯಕ್ರಮದ ಜೊತೆಗೆ ಶಾಲಾ-ಕಾಲೇಜುಗಳು, ಗ್ರಾಮ ಪಂಚಾಯಿತಿಗಳು ಹಾಗೂ ತಾಲೂಕು ಮಟ್ಟದಲ್ಲಿಯೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು.
ಜಯಂತಿ ದಿನದಂದು ಸಮಾಜದ ಸಾಧಕರನ್ನು ಗುರುತಿಸಿ ಸನ್ಮಾನಿಸಲು ನಿರ್ಧರಿಸಲಾಗಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ, ಪದವಿ ಹಂತದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿಗೆ, ಕ್ರೀಡಾ ಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಮಾಜದ ಹಿರಿಯರನ್ನು ಸನ್ಮಾನಿಸಲಾಗುವುದು.
ಇದೇ ವೇಳೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ತತ್ವ, ಸಾಮಾಜಿಕ ಸುಧಾರಣೆ ಹಾಗೂ ಅವರ ಸಂದೇಶಗಳ ಕುರಿತು ಆಳವಾಗಿ ಅಧ್ಯಯನ ಮಾಡಿದ ತಜ್ಞರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಕೇವಲ ಆಚರಣೆಗೆ ಸೀಮಿತವಾಗದೆ ನಾರಾಯಣ ಗುರುಗಳ ಆದರ್ಶಗಳನ್ನು ಜನರಿಗೆ ತಲುಪಿಸುವ ರೀತಿಯಲ್ಲಿ ಅರ್ಥಪೂರ್ಣವಾಗಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಕಾರ್ಯಕ್ರಮದ ವೇದಿಕೆ, ಊಟೋಪಹಾರ ವ್ಯವಸ್ಥೆ, ಅತಿಥಿಗಳ ಆಹ್ವಾನ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಪುಸ್ತಕ ಬಿಡುಗಡೆ ಸೇರಿದಂತೆ ವಿವಿಧ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕ ರಾಜಕುಮಾರ ಸೊಪಡ್ಲ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಗಣ್ಯರು ಮತ್ತು ಹಿರಿಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP