
ಬಾಗಲಕೋಟೆ, 19 ಆಗಸ್ಟ್ (ಹಿ.ಸ.)
ಆ್ಯಂಕರ್ : ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್ನಿಂದ ಪಣಜಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ಪಕ್ಕದಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಜಮಖಂಡಿ ತಾಲ್ಲೂಕಿನ ಕುಂಚನೂರ ಗ್ರಾಮದ ಅಮರಸಿದ್ದ ಕಾಂಬಳೆ (34) ಮೃತಪಟ್ಟಿದ್ದಾರೆ. ಬಸ್ ಪಲ್ಟಿಯಾದ ರಭಸಕ್ಕೆ ರಸ್ತೆ ಬದಿಯಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಗಂಭೀರವಾಗಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಹೈದರಾಬಾದ್ನಿಂದ ಪಣಜಿಯತ್ತ ಪ್ರಯಾಣಿಸುತ್ತಿದ್ದ ಬಸ್ ಬೀಳಗಿ ಕ್ರಾಸ್ ಸಮೀಪ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳನ್ನು ತಕ್ಷಣ ನೆರವಿಗೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ಯುವಲ್ಲಿ ಸಹಕರಿಸಿದರು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ಹೇಗೆ ನಿಯಂತ್ರಣ ತಪ್ಪಿತು, ಚಾಲಕನ ಅಜಾಗರೂಕತೆ ಅಥವಾ ಇತರೆ ಯಾವುದೇ ಕಾರಣದಿಂದ ಅಪಘಾತ ಸಂಭವಿಸಿದೆಯೇ ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.
ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮೃತ ಅಮರಸಿದ್ದ ಕಾಂಬಳೆ ಅವರ ಕುಟುಂಬಕ್ಕೆ ಈ ದುರ್ಘಟನೆ ಆಘಾತ ಉಂಟುಮಾಡಿದ್ದು, ಕುಟುಂಬಸ್ಥರ ಹಾಗೂ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ಬೀಳಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಅಪಘಾತದ ನಿಖರ ಕಾರಣ ಹಾಗೂ ಬಸ್ ಚಾಲಕನ ಹೊಣೆಗಾರಿಕೆ ಕುರಿತು ಪೊಲೀಸ್ ತನಿಖೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande