
ಬೆಂಗಳೂರು, 19 ಆಗಸ್ಟ್ (ಹಿ.ಸ.)
ಆ್ಯಂಕರ್:
ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅತಿಕ್ರಮಣಗಳನ್ನು ತೆರವುಗೊಳಿಸುವ ಅಭಿಯಾನವನ್ನು ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.
ಈಗಾಗಲೇ ಅತಿಕ್ರಮಣ ತೆರವುಗೊಳಿಸಿರುವ ಜಾಗದಲ್ಲೇ ಮತ್ತೆ ಮಳಿಗೆ ಅಥವಾ ವ್ಯಾಪಾರ ಆರಂಭಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರ ಸರಕು-ಸಾಮಗ್ರಿಗಳನ್ನು ಜಪ್ತಿ ಮಾಡುವುದರ ಜೊತೆಗೆ ದುಪ್ಪಟ್ಟು ದಂಡ ವಸೂಲಿ ಮಾಡುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೆಗೌಡ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಬಿಎ ವ್ಯಾಪ್ತಿಯ ಪ್ರಮುಖ ಸಭೆಯಲ್ಲಿ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿದ ಸಚಿವರು, ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯುತ್ತಿರುವ ತೆರವು ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಸೂಚಿಸಿದರು.
ಇದುವರೆಗೆ 964 ಕಿಲೋಮೀಟರ್‌ಗೂ ಅಧಿಕ ಉದ್ದದ ಕಾಲುದಾರಿಗಳನ್ನು ಅತಿಕ್ರಮಣಮುಕ್ತಗೊಳಿಸಲಾಗಿದ್ದು, ಉಳಿದಿರುವ ಜಾಗಗಳನ್ನು ಈ ತಿಂಗಳ ಅಂತ್ಯದೊಳಗೆ ಸಂಪೂರ್ಣವಾಗಿ ತೆರವುಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ತೆರವುಗೊಂಡ ಕೂಡಲೇ ಕಾಲುದಾರಿಗಳನ್ನು ಸಾರ್ವಜನಿಕರ ಬಳಕೆಗೆ ಯೋಗ್ಯವಾಗುವಂತೆ ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.
ನಗರವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಕಾರ್ಯಕ್ರಮವನ್ನೂ ಚುರುಕುಗೊಳಿಸಲಾಗಿದ್ದು, ಹೆಬ್ಬಾಳ ಮತ್ತು ಹೊರವರ್ತುಲ ರಸ್ತೆಯ ವಿವಿಧ ಭಾಗಗಳಲ್ಲಿ ಕಟ್ಟುನಿಟ್ಟಿನ ಸ್ವಚ್ಛತಾ ಅಭಿಯಾನ ನಡೆಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R