
ಬೆಂಗಳೂರು, 19 ಆಗಷ್ಟ್ (ಹಿ.ಸ.):
ಆ್ಯಂಕರ್:ರಾಜಧಾನಿ ಬೆಂಗಳೂರಿನ ವಿವಿಧೆಡೆ ಬುಧವಾರ ಸಂಜೆ ಹಠಾತ್ತನೆ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ ದಕ್ಷಿಣ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕೆಲವೆಡೆ ಭಾರಿ ಮಳೆಯಾಗಿದೆ.
ಜಯನಗರ, ಪದ್ಮನಾಭನಗರ, ಜೆ.ಪಿ. ನಗರ, ಎಡೆಯೂರು ಹಾಗೂ ಬಸವಗುಡಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿಯಿತು. ಕಚೇರಿ ಹಾಗೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು, ದ್ವಿಚಕ್ರ ವಾಹನ ಸವಾರರು ದಿಢೀರ್ ಮಳೆಯಿಂದಾಗಿ ಪರದಾಡುವಂತಾಯಿತು.
ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧೆಡೆ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದ್ದರೂ, ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
--
ಹಿಂದೂಸ್ತಾನ್ ಸಮಾಚಾರ್ / BHARGAVI G R