
ಬೆಂಗಳೂರು, 19 ಆಗಸ್ಟ್ (ಹಿ.ಸ.)
ಆ್ಯಂಕರ್:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸು ಹಾಗೂ ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ವರದಿ ಆಧರಿಸಿ, ನಿಯಮಬಾಹಿರವಾಗಿ ಹಂಚಿಕೆಯಾಗಿರುವ ಎಲ್ಲಾ ಬದಲಿ ನಿವೇಶನಗಳ ಹಂಚಿಕೆ ಆದೇಶಗಳನ್ನು ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರದ ಹಿಂದಿನ ನಿರ್ದೇಶನಗಳನ್ನು ಉಲ್ಲಂಘಿಸಿ ಮಾಡಿರುವ ಹಂಚಿಕೆಗಳಿಗೆ ಸಂಬಂಧಿಸಿದಂತೆ, ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಣಿಯಾಗಿರುವ ಕ್ರಯಪತ್ರಗಳನ್ನು ರದ್ದುಗೊಳಿಸಲು ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಲು ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇನ್ನೂ ಕ್ರಯಪತ್ರ ನೋಂದಣಿಯಾಗದ ಪ್ರಕರಣಗಳಲ್ಲಿ, ಸರ್ಕಾರ ಸ್ಪಷ್ಟ ಮಾರ್ಗಸೂಚಿ ರೂಪಿಸಿ ನಿರ್ದೇಶನ ನೀಡುವವರೆಗೆ ಮುಡಾದಿಂದ ಯಾವುದೇ ಹೊಸ ಕ್ರಯಪತ್ರ ಮಾಡಿಕೊಡದಂತೆ ನಿರ್ಬಂಧ ವಿಧಿಸಲಾಗಿದೆ.
ನೋಂದಣಿಯಾಗಿರುವ ನಿವೇಶನಗಳಿಗೆ ಖಾತೆ ಮಾಡುವುದನ್ನು ತಡೆಹಿಡಿಯುವಂತೆ ಮೈಸೂರು ಮಹಾನಗರ ಪಾಲಿಕೆ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಖಾತೆ ಮಾಡಿರುವ ಪ್ರಕರಣಗಳಲ್ಲಿ ನಿಯಮಾನುಸಾರ ಖಾತೆ ರದ್ದುಪಡಿಸುವಂತೆ ಸೂಚಿಸಲಾಗಿದೆ.
ಆದೇಶಗಳನ್ನು ಜಿಲ್ಲಾಧಿಕಾರಿ, ಮುಡಾ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಕಡ್ಡಾಯವಾಗಿ ಜಾರಿಗೊಳಿಸಬೇಕು. ಕರ್ತವ್ಯಲೋಪ ಕಂಡುಬಂದರೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಎಚ್ಚರಿಕೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / BHARGAVI G R