
ಬೆಂಗಳೂರು, 19 ಆಗಸ್ಟ್ (ಹಿ.ಸ.):
ಆ್ಯಂಕರ್:ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಬೇಟೆ ವಿರೋಧಿ ಶಿಬಿರಗಳ ಮೇಲೆ ದಾಳಿ ನಡೆಸಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಂಡು, ಅರಣ್ಯ ಸಿಬ್ಬಂದಿಗೆ ನಿರಂತರ ಪೊಲೀಸ್ ರಕ್ಷಣೆ ಒದಗಿಸುವಂತೆ ಸ್ವತಂತ್ರ ಹಿರಿಯ ಪತ್ರಕರ್ತ ಹಾಗೂ ರಾಜ್ಯ ವನ್ಯಜೀವಿ ಮಂಡಳಿಯ ಮಾಜಿ ಸದಸ್ಯ ಜೋಸೆಫ್ ಹೂವರ್ ಆಗ್ರಹಿಸಿದ್ದಾರೆ.
ಮೂವರು ಬೇಟೆಗಾರರ ಸಾವಿನ ಹಿನ್ನೆಲೆಯಲ್ಲಿ ಅವರ ಸಹಚರರು ಪ್ರತೀಕಾರದ ಉದ್ದೇಶದಿಂದ ಅರಣ್ಯ ಸಿಬ್ಬಂದಿ ಹಾಗೂ ಬೇಟೆ ವಿರೋಧಿ ಶಿಬಿರಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ಸುಮಾರು ಏಳು ಬೇಟೆ ವಿರೋಧಿ ಶಿಬಿರಗಳ ಮೇಲೆ ದಾಳಿ ನಡೆಸಿ, ಅವುಗಳನ್ನು ಭಾಗಶಃ ಧ್ವಂಸಗೊಳಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಘಟನೆಗಳಿಂದ ಅರಣ್ಯ ಸಿಬ್ಬಂದಿಯಲ್ಲಿ ಜೀವಭಯ ಉಂಟಾಗಿದ್ದು, ರಾತ್ರಿ ವೇಳೆ ಗಸ್ತು ಮತ್ತು ರಕ್ಷಣಾ ಕರ್ತವ್ಯ ನಿರ್ವಹಿಸಲು ಆತಂಕಪಡುತ್ತಿದ್ದಾರೆ. ಇದರಿಂದ ಕಾವೇರಿ ವನ್ಯಜೀವಿ ಅಭಯಾರಣ್ಯದ ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಬೇಟೆಗಾರರು ಹಾಗೂ ಮರಗಳ ಕಳ್ಳಸಾಗಣೆದಾರರ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.
ಅರಣ್ಯ ಸಿಬ್ಬಂದಿ ಹಾಗೂ ಬೇಟೆ ವಿರೋಧಿ ಶಿಬಿರಗಳ ಮೇಲೆ ದಾಳಿ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಅರಣ್ಯ ಪ್ರದೇಶದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಅರಣ್ಯ ಸಿಬ್ಬಂದಿಗೆ ಅಗತ್ಯ ಭದ್ರತೆ ಒದಗಿಸಿ ವನ್ಯಜೀವಿ ಸಂಪತ್ತಿನ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಹನೂರು ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ ಜೋಸೆಫ್ ಹೂವರ್ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.