ರನ್ನ ಭವನದಲ್ಲಿ ಡಿ.ದೇವರಾಜ ಅರಸು 111ನೇ ಜನ್ಮದಿನಾಚರಣೆ
ಬಾಗಲಕೋಟೆ, 20 ಆಗಸ್ಟ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವ
ಸದ್ಭಾವನೆ


ಬಾಗಲಕೋಟೆ, 20 ಆಗಸ್ಟ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ರನ್ನ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯಕ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ದೇವರಾಜ ಅರಸು ಅವರು ರಾಜ್ಯದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ದೂರದೃಷ್ಟಿಯ ನಾಯಕರು ಎಂದು ಸ್ಮರಿಸಿದರು. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ದೊರೆಯಬೇಕು ಎಂಬ ಆಶಯದೊಂದಿಗೆ ಅರಸು ಅವರು ಹಲವು ಜನಪರ ಹಾಗೂ ಸಾಮಾಜಿಕ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಪ್ರಾಚಾರ್ಯ ಎ.ಎಚ್. ಬರಗಿ ಅವರು, ದೇವರಾಜ ಅರಸು ಅವರ ಜೀವನ, ಆಡಳಿತದ ದೂರದೃಷ್ಟಿ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆ ಕುರಿತು ವಿವರಿಸಿದರು. ಹಿಂದುಳಿದ ವರ್ಗಗಳು, ಬಡವರು, ರೈತರು ಹಾಗೂ ದುರ್ಬಲ ವರ್ಗಗಳ ಸಬಲೀಕರಣಕ್ಕೆ ಅರಸು ಅವರು ಕೈಗೊಂಡ ಕ್ರಮಗಳು ಕರ್ನಾಟಕದ ಸಾಮಾಜಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿವೆ ಎಂದು ಹೇಳಿದರು.

ದೇವರಾಜ ಅರಸು ಅವರು ಅಧಿಕಾರವನ್ನು ಕೇವಲ ಆಡಳಿತ ನಡೆಸುವ ಸಾಧನವಾಗಿ ಪರಿಗಣಿಸದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದರು. ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಭೂ ಸುಧಾರಣೆ, ಶಿಕ್ಷಣ ಹಾಗೂ ಹಿಂದುಳಿದ ವರ್ಗಗಳ ಪ್ರಗತಿಗೆ ಹೆಚ್ಚಿನ ಆದ್ಯತೆ ದೊರೆತಿತ್ತು. ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದ್ದು, ಯುವಜನತೆ ಅವರ ಆದರ್ಶಗಳನ್ನು ಅರಿತುಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಗೋಪಾಲ ಕಾಸೆ, ಸಿಪಿಐ ಎಂ. ನಾಗರಡ್ಡಿ, ಅರಣ್ಯ ಇಲಾಖೆ ಅಧಿಕಾರಿ ಎಚ್.ಬಿ. ಡೋಣಿ, ಕೃಷಿ ಇಲಾಖೆ ಅಧಿಕಾರಿ ಎಸ್.ಬಿ. ದೊಡಮನಿ, ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮಲಘಾಣ, ಎಪಿಎಂಸಿ ಉಪಾಧ್ಯಕ್ಷ ಭೀಮನಪ್ಪ ಮೆಟಗುಡ್ಡ, ಅಲೆಮಾರಿ ಜನಾಂಗದ ಅಧ್ಯಕ್ಷ ಸಾಲಮಂಟಪಿ, ಕೆಎಸ್ಆರ್ಟಿಸಿ ಘಟಕ ವ್ಯವಸ್ಥಾಪಕಿ ವಿದ್ಯಾ ನಾಯಕ, ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಮಹ್ಮದ್ ಹನೀಫ್ ತಹಶೀಲ್ದಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande