
ವಿಜಯಪುರ, 20 ಆಗಸ್ಟ್ (ಹಿ.ಸ.)
ಆ್ಯಂಕರ್ : ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಶಾಂತಿ ಸಭೆ ಆಯೋಜಿಸಲಾಯಿತು.
ಸಭೆಯಲ್ಲಿ ಜಿಲ್ಲೆಯ ವಿವಿಧ ಸಮುದಾಯಗಳ ಮುಖಂಡರು, ಧಾರ್ಮಿಕ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ಆಚರಿಸುವ ಕುರಿತು ಚರ್ಚಿಸಿದರು. ಈದ್-ಮಿಲಾದ್ ಹಬ್ಬವು ಸಹೋದರತ್ವ, ಸೌಹಾರ್ದತೆ ಹಾಗೂ ಪರಸ್ಪರ ಗೌರವದ ಸಂದೇಶ ಸಾರುವ ಹಬ್ಬವಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಎಲ್ಲರೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.
ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟಾಗದಂತೆ ಪ್ರತಿಯೊಬ್ಬರೂ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು. ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಪ್ರಚೋದನಕಾರಿ ಅಥವಾ ಸುಳ್ಳು ಮಾಹಿತಿಗಳಿಗೆ ಪ್ರತಿಕ್ರಿಯಿಸದೆ, ಶಾಂತಿ ಕಾಪಾಡುವಲ್ಲಿ ಸಾರ್ವಜನಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.
ವಿವಿಧ ಸಮುದಾಯಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು, ವಿಜಯಪುರ ಜಿಲ್ಲೆಯಲ್ಲಿ ಹಬ್ಬವನ್ನು ಶಾಂತಿ, ಸೌಹಾರ್ದತೆ ಮತ್ತು ಪರಸ್ಪರ ಸಹಕಾರದೊಂದಿಗೆ ಆಚರಿಸುವುದಾಗಿ ಭರವಸೆ ನೀಡಿದರು. ಸಾರ್ವಜನಿಕರ ಸುರಕ್ಷತೆ ಮತ್ತು ಹಬ್ಬದ ಸಂದರ್ಭದಲ್ಲಿ ಸುಗಮ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಲಾಯಿತು.
ಶಾಂತಿ ಸಭೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಕೆ. ಆನಂದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ್ ಹಾಗೂ ವಿಜಯಪುರ ನಗರಸಭೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಸೇರಿದಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande