



ಕೊಪ್ಪಳ, 21 ಆಗಸ್ಟ್ (ಹಿ.ಸ.)
ಆ್ಯಂಕರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ (ಕೆಕೆಆರ್ಟಿಸಿ) ಒಟ್ಟಾರೆ 400 ನೂತನ ಬಸ್ಗಳು ಮಂಜೂರಾಗಿದ್ದು, ಶೀಘ್ರದಲ್ಲೇ ‘ಪಿಎಂ ಇ-ಬಸ್ ಸೇವಾ’ ಯೋಜನೆಯಡಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ಗಳು ನಿಗಮಕ್ಕೆ ಸೇರ್ಪಡೆಗೊಳ್ಳಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಅರುಣ ಕುಮಾರ ಪಾಟೀಲ್ ಹೇಳಿದರು.
ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ ಅವರು, ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರಿಗೆ ಸೌಲಭ್ಯಗಳ ಪರಿಶೀಲನೆ ನಡೆಸಿದರು.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಭೇಟಿಯ ವೇಳೆ ಕೊಪ್ಪಳ ಸಂಸದರಾದ ರಾಜಶೇಖರ ಹಿಟ್ನಾಳ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಸಂಸದರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಿಗೆ ಹಾಗೂ ಗ್ರಾಮೀಣ ಭಾಗದ ಜನರಿಗೆ ಇನ್ನಷ್ಟು ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವಂತೆ ಅಧ್ಯಕ್ಷರಲ್ಲಿ ಮನವಿ ಮಾಡಿದರು.
*ಕೇಂದ್ರೀಯ ಬಸ್ ನಿಲ್ದಾಣ ಪರಿಶೀಲನೆ:* ನಂತರ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅಧ್ಯಕ್ಷರು, ಅಲ್ಲಿನ ಮೂಲಭೂತ ಸೌಕರ್ಯಗಳು, ದ್ವಿಚಕ್ರ ವಾಹನ ನಿಲುಗಡೆ (ಪಾರ್ಕಿಂಗ್) ವ್ಯವಸ್ಥೆ, ಶೌಚಾಲಯ ಹಾಗೂ ಮೂತ್ರಾಲಯಗಳ ಸ್ವಚ್ಛತೆ ನಿರ್ವಹಣೆಯನ್ನು ಖುದ್ದಾಗಿ ಪರಿಶೀಲಿಸಿದರು. ಜೊತೆಗೆ ಬಸ್ ಪಾಸ್ ವಿತರಣಾ ಕೌಂಟರ್ಗೆ ತೆರಳಿ, ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಪಾಸ್ ವಿತರಣೆ ಸಮರ್ಪಕವಾಗಿ ನಡೆಯುತ್ತಿದೆಯೇ ಎಂಬ ವಾಸ್ತವಿಕ ಸ್ಥಿತಿಗತಿಯನ್ನು ಪರಿಶೀಲಿಸಿದರು.
*ಎಲೆಕ್ಟ್ರಿಕ್ ಬಸ್ ಘಟಕ ನಿರ್ಮಾಣಕ್ಕೆ ಸೂಚನೆ:* ಜಿಲ್ಲಾಧಿಕಾರಿಗಳ ಅನುಮೋದನೆಯಂತೆ ಕೆಕೆಆರ್ಟಿಸಿಗೆ ಮಂಜೂರಾಗಿರುವ 5 ಎಕರೆ ಖಾಲಿ ನಿವೇಶನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರವಾಗಿ ಎಲೆಕ್ಟ್ರಿಕ್ ಬಸ್ ಘಟಕ ನಿರ್ಮಾಣ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಕೊಪ್ಪಳ ವಿಭಾಗೀಯ ಕಚೇರಿಯ ಪಕ್ಕದಲ್ಲಿರುವ ಹಳೆಯ ವಸತಿ ಗೃಹಗಳನ್ನು ತೆರವುಗೊಳಿಸಿದ ಸ್ಥಳವನ್ನು ವೀಕ್ಷಿಸಿದರು.
*ಪ್ರಗತಿ ಪರಿಶೀಲನಾ ಸಭೆ :* ವಿಭಾಗೀಯ ಕಚೇರಿಯಲ್ಲಿ ದಿವಂಗತ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಬಳಿಕ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಎಲ್ಲಾ ಶಾಖಾ ಮುಖ್ಯಸ್ಥರು ಹಾಗೂ ಘಟಕ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ, ವಿಭಾಗದ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೇವೆ ಒದಗಿಸಲು ಸಿಬ್ಬಂದಿ ಬದ್ಧರಾಗಿರಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಅರುಣ ಕುಮಾರ ಪಾಟೀಲ್ ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಶಿನಿಯ್ಯ ಸೇರಿದಂತೆ ಘಟಕ ವ್ಯಾವಸ್ಥಾಪಕರು, ಶಾಖಾ ಮುಖ್ಯಸ್ಥರು ಹಾಗೂ ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್