
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯದ 500 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಾಗೂ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ನಡುವೆ ₹2,500 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಯೋಜನೆಯ ಒಟ್ಟು ಮೊತ್ತದಲ್ಲಿ ಎಡಿಬಿ ₹1,750 ಕೋಟಿ ನೆರವು ನೀಡಲಿದ್ದು, ರಾಜ್ಯ ಸರ್ಕಾರ ₹750 ಕೋಟಿ ಭರಿಸಲಿದೆ. 2026ರಿಂದ 2030ರ ಅವಧಿಯಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದ್ದು, ಪ್ರತಿ ಕೆಪಿಎಸ್ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ.
ಯೋಜನೆಯಡಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ, ಉಚಿತ ಸಾರಿಗೆ, ದ್ವಿಭಾಷಾ ಬೋಧನೆ, ಕಂಪ್ಯೂಟರ್ ಮತ್ತು ಕೃತಕ ಬುದ್ಧಿಮತ್ತೆ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ವೃತ್ತಿಪರ ಮಾರ್ಗದರ್ಶನಕ್ಕೆ ಆದ್ಯತೆ ನೀಡಲಾಗುತ್ತದೆ. ಸಂಗೀತ, ಸಾಹಿತ್ಯ, ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಉತ್ತೇಜನ ನೀಡಲಾಗುತ್ತದೆ.
ವಿದ್ಯಾರ್ಥಿಗಳ ಪ್ರಗತಿ ಮೇಲ್ವಿಚಾರಣೆ, ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರ ಸಭೆ ಹಾಗೂ 6ನೇ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮತ್ತು ವೃತ್ತಿಪರ ಮಾರ್ಗದರ್ಶನ ನೀಡುವ ವ್ಯವಸ್ಥೆ ರೂಪಿಸಲಾಗುತ್ತದೆ. ಶಿಕ್ಷಕರ ಸಾಮರ್ಥ್ಯ ವೃದ್ಧಿಗೂ ವಿಶೇಷ ಕಾರ್ಯಯೋಜನೆ ರೂಪಿಸಲಾಗಿದ್ದು, 10 ಮತ್ತು 12ನೇ ತರಗತಿ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡಲಾಗುತ್ತದೆ.
ಗ್ರಾಮೀಣ ಭಾಗದ ಮಕ್ಕಳಿಗೆ 21ನೇ ಶತಮಾನದ ಕೌಶಲ್ಯಗಳನ್ನು ಕಲಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಬೆಳೆಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಡಿಜಿಟಲ್ ಕಲಿಕೆ, ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ 2030ರೊಳಗೆ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದೆ.
ಈ ಸಂದರ್ಭದಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಸೇರಿದಂತೆ ಎಡಿಬಿಯ ಅಧಿಕಾರಿಗಳು ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.