



ಗಂಗಾವತಿ, 21 ಆಗಸ್ಟ್ (ಹಿ.ಸ.)
ಆ್ಯಂಕರ್: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಬಾಲ್ಯವಿವಾಹ ಹಾಗೂ ಇತರ ಅಪರಾಧಗಳನ್ನು ತಡೆಗಟ್ಟಲು ಮಕ್ಕಳ ಹಕ್ಕುಗಳು, ಕಾನೂನುಗಳು ಮತ್ತು ಸುರಕ್ಷತೆ ಕುರಿತು ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಮಾಜಿಕ ಕಾರ್ಯಕರ್ತೆ ಯಮನಮ್ಮ ಹೇಳಿದರು.
ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿಯ ಕೆಎಲ್ಇ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಕೆಎಲ್ಇ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ‘ಮಕ್ಕಳ ಮೇಲಿನ ದೌರ್ಜನ್ಯ ತಡೆಗಾಗಿ ಜನಸಂಪರ್ಕ ಸಂವಾದ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.
18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಯಲು ಪೋಕ್ಸೊ ಕಾಯ್ದೆ ಜಾರಿಯಲ್ಲಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುವುದು, ಪ್ರಚೋದಿಸುವುದು, ಸಹಾಯ ಮಾಡುವುದು ಅಥವಾ ಅಂತಹ ಕೃತ್ಯಕ್ಕೆ ಪ್ರಯತ್ನಿಸುವುದು ಕೂಡ ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದರು. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಿವಾಹ ಮಾಡುವುದು, ಅದರಲ್ಲಿ ಭಾಗವಹಿಸುವುದು ಅಥವಾ ಪ್ರೋತ್ಸಾಹಿಸುವುದು ಕಾನೂನುಬಾಹಿರವಾಗಿದೆ. ಬಾಲ್ಯವಿವಾಹದಿಂದ ತಾಯಿ ಮತ್ತು ಶಿಶು ಮರಣ, ಅಪೌಷ್ಟಿಕತೆ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಬಾಲ್ಯವಿವಾಹ ತಡೆಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.
ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ ಸಂಯೋಜಕ ಶರಣಪ್ಪ ಮಾತನಾಡಿ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಮಕ್ಕಳ ಭಿಕ್ಷಾಟನೆ, ಲೈಂಗಿಕ ದೌರ್ಜನ್ಯ, ಕಾಣೆಯಾದ ಮಗು, ಬಿಸಾಡಿದ ಮಗು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಮಾಹಿತಿ ದೊರೆತರೆ 1098 ಅಥವಾ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿ ನೀಡಿದವರ ವಿವರಗಳನ್ನು ಗೌಪ್ಯವಾಗಿರಿಸಿ, ವಿವಿಧ ಇಲಾಖೆಗಳ ಸಹಯೋಗದಲ್ಲಿ ಮಗುವಿನ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್ಐ ಚಂದಪ್ಪ ಅವರು ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಎಲ್ಇ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಮಾನಸ ವಹಿಸಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ, ನಾಗರತ್ನ, ಚೈತ್ರ, ಶರಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಹಶಿಕ್ಷಕ ಚಂದ್ರಶೇಖರಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್