
ಬಾಗಲಕೋಟೆ, 21 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ಮಡ್ಡಿ ಓಣಿಯ ಆರಾಧ್ಯ ದೇವತೆ ಶ್ರೀ ಲಕ್ಷ್ಮಿದೇವಿ ಜಾತ್ರೋತ್ಸವದ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆ ಭಕ್ತಿಭಾವ ಹಾಗೂ ಸಡಗರದಿಂದ ಜರುಗಿತು.
ಮೆರವಣಿಗೆಯಲ್ಲಿ ಗ್ರಾಮದ ವಿವಿಧ ಬಡಾವಣೆಗಳಿಂದ ಆಗಮಿಸಿದ್ದ ನೂರಾರು ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.
ಜಾತ್ರೋತ್ಸವದ ಅಂಗವಾಗಿ ದೇವಿಯ ಭಾವಚಿತ್ರವನ್ನು ಸಕಲ ವಾದ್ಯಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಭಕ್ತರು ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಆರತಿ ಬೆಳಗಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅಪಾರ ಸಂಖ್ಯೆಯ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದ ಭಂಡಾರದೊಕುಳಿ ಕಾರ್ಯಕ್ರಮದಲ್ಲಿ ಭಕ್ತರು ಉತ್ಸಾಹದಿಂದ ಪಾಲ್ಗೊಂಡರು. ಪರಸ್ಪರ ಭಂಡಾರ ಎರಚಿಕೊಂಡು ಸಂಭ್ರಮಿಸಿದ ಭಕ್ತರು ಜಾತ್ರೆಯ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ಭಂಡಾರದ ಹಳದಿ ಬಣ್ಣದಿಂದ ಮೆರವಣಿಗೆಯ ವಾತಾವರಣವೇ ಕಂಗೊಳಿಸಿದ್ದು, ಗ್ರಾಮದಾದ್ಯಂತ ಹಬ್ಬದ ಸಡಗರ ಮನೆಮಾಡಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಬಸವರಾಜ ಮಿರ್ಜಿ, ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಲಕ್ಷ್ಮಿದೇವಿ ಜಾತ್ರೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಜಾತ್ರೆಯ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆಯಬೇಕು ಎಂದು ಮನವಿ ಮಾಡಿದರು.
ಜಾತ್ರೋತ್ಸವಕ್ಕೆ ದೂರದ ಊರುಗಳಿಂದಲೂ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ದಾಸೋಹದ ವ್ಯವಸ್ಥೆಯನ್ನೂ ಮಾಡಲಾಗಿದೆ. ಎಲ್ಲ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.
ಹಲಗಲಿ ಗ್ರಾಮದ ಮಡ್ಡಿ ಓಣಿಯಲ್ಲಿ ನಡೆಯುತ್ತಿರುವ ಲಕ್ಷ್ಮಿದೇವಿ ಜಾತ್ರೋತ್ಸವವು ಗ್ರಾಮಸ್ಥರ ಧಾರ್ಮಿಕ ನಂಬಿಕೆ, ಭಕ್ತಿ ಹಾಗೂ ಪರಂಪರೆಯನ್ನು ಪ್ರತಿಬಿಂಬಿಸುವ ಪ್ರಮುಖ ಆಚರಣೆಯಾಗಿದ್ದು, ಪ್ರತಿವರ್ಷವೂ ಸಾವಿರಾರು ಭಕ್ತರನ್ನು ಸೆಳೆಯುತ್ತಿದೆ.
ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಮನೆಮನೆಗಳಲ್ಲಿ ಸಂಭ್ರಮ ಮನೆಮಾಡಿದೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande