
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಠೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಬವಣೆ ಹೆಚ್ಚಾಗಿದ್ದು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಇಂತಹ ಸಂದರ್ಭದಲ್ಲಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಸಮಸ್ಯೆಗಳ ಕುರಿತು ಸದನದಲ್ಲಿ ಚರ್ಚೆ ನಡೆಸಬೇಕಿದ್ದ ಬಿಜೆಪಿ ಶಾಸಕರು, ಸದನ ನಡೆಯದಂತೆ ಗದ್ದಲ ನಡೆಸಿ ಅಮೂಲ್ಯ ಸಮಯವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ನ್ಯಾಯಯುತ ಪಾಲಿನ ಕುರಿತು ಸದನದಲ್ಲಿ ಚರ್ಚೆಯಾಗಬಹುದು ಎಂಬ ಕಾರಣಕ್ಕೆ ಬಿಜೆಪಿ ಶಾಸಕರು ಬರದ ಕುರಿತು ಚರ್ಚೆಯಿಂದ ಪಲಾಯನ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಕ್ಷಿಸಲು ಈ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ ಎಂದು ಹರಿಪ್ರಸಾದ್ ಆರೋಪಿಸಿದರು.
ರಾಜ್ಯದ ಜನರ ಸಮಸ್ಯೆಗಳನ್ನು ಚರ್ಚಿಸಲು ಯೋಗ್ಯತೆ ತೋರದ ವಿರೋಧ ಪಕ್ಷವನ್ನು ಜನರು ಕ್ಷಮಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.