
ಗದಗ, 21 ಆಗಸ್ಟ್ (ಹಿ.ಸ.)
ಆ್ಯಂಕರ್:- ಯುವಕರನ್ನು ದೇಶದ ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಭಾರತ ಜೋಡೋ ಯುವ ಸಂಘಗಳ ಸ್ಥಾಪನೆಗೆ ನಾವೆಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಕೇಸ್ವಾನ ವಿಡಿಯೋ ಕಾನ್ಪರೆನ್ಸ್ ಹಾಲ್ ದಲ್ಲಿ ರಂದು ಜರುಗಿದ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಕುರಿತು ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 'ಭಾರತ ಜೋಡೋ ಯುವ ಸಂಘ'ಗಳನ್ನು ಪರಿಣಾಮಕಾರಿಯಾಗಿ ಸ್ಥಾಪಿಸಲು ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಯುವಶಕ್ತಿಯು ದೇಶದ ಅತಿದೊಡ್ಡ ಸಂಪತ್ತು. ಅದನ್ನು ಸೃಜನಶೀಲ ಹಾಗೂ ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ದೇಶದ ಅಭಿವೃದ್ಧಿಗೆ ವೇಗ ನೀಡಲು ಭಾರತ ಜೋಡೋ ಯುವ ಸಂಘಗಳು ಪ್ರಮುಖ ಪಾತ್ರ ವಹಿಸಲಿವೆ, ಎಂದರು.
ಈ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ,ಪಟ್ಟಣ ಪಂಚಾಯತಿ, ಪುರಸಭೆ ಹಾಗೂ ನಗರ ಸಭೆಗಳ ವ್ಯಾಪ್ತಿಯಲ್ಲಿ ಭಾರತ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂಪಾಯಿ ಅನುದಾನ ಲಭ್ಯವಾಗಲಿದೆ. ಜಿಲ್ಲೆಯಲ್ಲಿ ಇದುವರೆಗೆ 3500 ಕ್ಕೂ ಹೆಚ್ಚು ಸದಸ್ಯರಾಗಿದ್ದಾರೆ. 178 ಸಂಘಗಳನ್ನು ರಚಿಸಲಾಗುವುದು. 16 ರಿಂದ 35 ವರ್ಷ ಮೇಲ್ಪಟ್ಟ ಯುವಕ ಮತ್ತು ಯುವತಿಯರು ಈ ಸಂಘಗಳ ಸದಸ್ಯರಾಗಲು ಅರ್ಹರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 18,000 ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಸಂಘಗಳ ಕಾರ್ಯನಿರ್ವಹಣೆ ಮತ್ತು ಅನುದಾನದ ಬಳಕೆಗಾಗಿ 15 ಮಂದಿ ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗುವುದು. ಜಿಲ್ಲಾಧಿಕಾರಿಗಳು ಪದಾಧಿಕಾರಿಗಳನ್ನು ನೇಮಕ ಮಾಡಲಿದ್ದು, ತಹಶೀಲ್ದಾರ್, ಬಿಇಒ, ಇಒ, ಸಮಾಜ ಕಲ್ಯಾಣ ಅಧಿಕಾರಿ, ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಅಧಿಕಾರಿಗಳನ್ನು ಒಳಗೊಂಡ ಮೇಲ್ವಿಚಾರಣಾ ಸಮಿತಿಯು ಸಂಘಗಳ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲಿದೆ ಎಂದರು.
ಯುವಕರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ಮತ್ತು ದೇಶಪ್ರೇಮದ ಭಾವನೆಯನ್ನು ಜಾಗೃತಗೊಳಿಸಲು ಈ ಸಂಘಗಳು ಸಹಕಾರಿಯಾಗಲಿವೆ. ಆದ್ದರಿಂದ, ಈ ಸಂಘಗಳ ಸ್ಥಾಪನೆ ಮತ್ತು ಕಾರ್ಯನಿರ್ವಹಣೆಗೆ ಎಲ್ಲರೂ ಸಹಕಾರ ನೀಡಬೇಕು, ಎಂದು ಜಿಲ್ಲಾಧಿಕಾರಿ ಶ್ರೀಧರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಭಾರತ ಜೋಡೋ ಯುವ ಸಂಘಗಳ ಉದ್ದೇಶಗಳು, ಕಾರ್ಯನಿರ್ವಹಣೆ, ಅನುದಾನದ ಬಳಕೆ ಮತ್ತು ಮೇಲ್ವಿಚಾರಣೆ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಘಗಳ ಸ್ಥಾಪನೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಈ ಯೋಜನೆಯು ಯುವಕರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಅಲ್ಲದೆ, ಯುವಕರ ಶಕ್ತಿ ಮತ್ತು ಪ್ರತಿಭೆಯನ್ನು ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಲು ಒಂದು ಉತ್ತಮ ವೇದಿಕೆ ಕಲ್ಪಿಸಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ. ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್ ಮುಂಡರಗಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ ಶರಣು ಗೋಗೇರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಡಾ.ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ್ ಎಮ್. ತುಂಬುರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ್ ಬಿದರಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) ಹಾಗೂ ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP