ಸಚಿವ ಕಾಶಪ್ಪನವರ ವಿರುದ್ದ ಮಾಜಿ ಶಾಸಕ ದೊಡ್ಡನಗೌಡ ವಾಗ್ದಾಳಿ
ಬಾಗಲಕೋಟೆ, 21 ಆಗಸ್ಟ್ (ಹಿ.ಸ.) ಆ್ಯಂಕರ್ : ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಇದೀಗ ಹುನಗುಂದ ಕ್ಷೇತ್ರದ ರಾಜಕೀಯ ಬೆಳವಣಿಗೆಗಳಿಗೂ ವೇದಿಕೆಯಾಗಿದೆ. ಧರಣಿಯಲ್ಲಿ ಹುನಗುಂದ ಕ್ಷೇತ್ರದ ಮಾಜಿ ಶಾಸಕ ದೊಡ
ಮರಳು


ಬಾಗಲಕೋಟೆ, 21 ಆಗಸ್ಟ್ (ಹಿ.ಸ.)

ಆ್ಯಂಕರ್ : ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಇದೀಗ ಹುನಗುಂದ ಕ್ಷೇತ್ರದ ರಾಜಕೀಯ ಬೆಳವಣಿಗೆಗಳಿಗೂ ವೇದಿಕೆಯಾಗಿದೆ. ಧರಣಿಯಲ್ಲಿ ಹುನಗುಂದ ಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರು ಕ್ಷೇತ್ರದಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳು ಗಣಿಗಾರಿಕೆ ವಿಚಾರವನ್ನು ಪ್ರಸ್ತಾಪಿಸಿ, ಸಣ್ಣ ಕೈಗಾರಿಕೆ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ವಿಚಾರದಲ್ಲಿ ಸಚಿವ ಕಾಶಪ್ಪನವರ ಅವರ ಪಾತ್ರದ ಬಗ್ಗೆ ಪ್ರಶ್ನೆ ಎತ್ತಿರುವ ದೊಡ್ಡನಗೌಡ ಪಾಟೀಲ, ಈ ಆರೋಪಗಳ ಕುರಿತು ಸಾರ್ವಜನಿಕವಾಗಿ ಚರ್ಚಿಸಲು ಸಿದ್ಧ ಎಂದು ಹೇಳುವ ಮೂಲಕ ಸಚಿವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಅಷ್ಟೇ ಅಲ್ಲದೆ, ಅಕ್ರಮ ಮರಳು ಗಣಿಗಾರಿಕೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿವ ಕಾಶಪ್ಪನವರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಅವರನ್ನು ಆಗ್ರಹಿಸಿದ್ದಾರೆ.

ಕಾಶಪ್ಪನವರ ಕೈಬಿಡಲು ಒತ್ತಾಯ

ಒಬ್ಬ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಸಂದರ್ಭದಲ್ಲಿ ಮತ್ತೊಬ್ಬ ಸಚಿವರ ವಿರುದ್ಧದ ಆರೋಪಗಳನ್ನೂ ಬಿಜೆಪಿ ನಾಯಕರು ಪ್ರಸ್ತಾಪಿಸಿರುವುದು ರಾಜಕೀಯವಾಗಿ ಗಮನ ಸೆಳೆದಿದೆ. ವಿಶೇಷವಾಗಿ ಹುನಗುಂದ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಾಜಿ ಶಾಸಕ ದೊಡ್ಡನಗೌಡರು ಸಚಿವ ಕಾಶಪ್ಪನವರ ವಿರುದ್ಧ ನೇರ ವಾಗ್ದಾಳಿ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಬಾಗಲಕೋಟೆ ಜಿಲ್ಲೆಯ ಹುನಗುಂದ, ಇಳಕಲ್, ಜಮಖಂಡಿ ಸೇರಿದಂತೆ ವಿವಿಧೆಡೆ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ ಎನ್ನಲಾದ ಪ್ರದೇಶಗಳ ಮೇಲೆ ದಾಳಿ ನಡೆಸಿತ್ತು. ಈ ಬೆಳವಣಿಗೆ ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಲೋಕಾಯುಕ್ತ ದಾಳಿ ಕುರಿತು ಪ್ರತಿಕ್ರಿಯಿಸಿದ್ದ ಸಚಿವ ವಿಜಯಾನಂದ ಕಾಶಪ್ಪನವರ, “ಕಳ್ಳರು ಹೇಳಿ ಕೇಳಿ ಕಳ್ಳತನಕ್ಕೆ ಬರುವುದಿಲ್ಲ. ಅವರನ್ನು ಹಿಡಿಯುವುದು ಕಷ್ಟ” ಎಂಬ ಅರ್ಥದ ಹೇಳಿಕೆ ನೀಡಿದ್ದರು. ಇದೀಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆಯ ಹಿಂದೆ ಸಚಿವ ಕಾಶಪ್ಪನವರ ಹಾಗೂ ಅವರ ಬೆಂಬಲಿಗರ ಪಾತ್ರವಿದೆ ಎಂದು ದೊಡ್ಡನಗೌಡ ಪಾಟೀಲ ಆರೋಪಿಸಿದ್ದಾರೆ. ಅಲ್ಲದೆ, ಈ ಕುರಿತು ಸಾರ್ವಜನಿಕವಾಗಿ ಚರ್ಚಿಸಲು ವೇದಿಕೆ ಸಿದ್ಧಪಡಿಸುವುದಾಗಿ ಹೇಳಿರುವ ಅವರು, “ಶಕ್ತಿ ಇದ್ದರೆ ಚರ್ಚೆಗೆ ಬನ್ನಿ. ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಸ್ಥಳಗಳನ್ನು ನಾನೇ ತೋರಿಸುತ್ತೇನೆ” ಎಂದು ಸಚಿವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande