
ಬೆಂಗಳೂರು, 21 ಆಗಸ್ಟ್ (ಹಿ.ಸ.):
ಆ್ಯಂಕರ್:ಗಂಭೀರ ಆರೋಪ ಹಾಗೂ ಕಳಂಕಕ್ಕೆ ಗುರಿಯಾಗಿರುವ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರಕ್ಕೆ ಕಿಂಚಿತ್ತಾದರೂ ನೈತಿಕತೆ ಇದ್ದರೆ ಹಾಗೂ ಜನತೆಗೆ ಉತ್ತರದಾಯಿ ಎಂಬ ಭಾವನೆ ಉಳಿದಿದ್ದರೆ, ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಅಥವಾ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಸದನ ಆರಂಭಕ್ಕೂ ಮುನ್ನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಕಪ್ಪು ಟೀಶರ್ಟ್ ಧರಿಸಿ ಪ್ರತಿಭಟನೆ ನಡೆಸಿದರು. ಮಹರ್ಷಿ ವಾಲ್ಮೀಕಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಬಳಿಕ ಶಾಸಕರು ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.