ಪಿಯು ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ವಿತರಣೆ:ಸಚಿವ ಮಧು ಬಂಗಾರಪ್ಪ
ಶಾಲಾ ಶಿಕ್ಷಣ ಇಲಾಖೆ ಮಹತ್ವದ ಘೋಷಣೆ
2puc textbook


ಬೆಂಗಳೂರು, 22 ಆಗಸ್ಟ್ (ಹಿ.ಸ.):

ಆ್ಯಂಕರ್:

ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಈಗಾಗಲೇ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಉಚಿತ ನೋಟ್ಬುಕ್ಗಳನ್ನು ಕೂಡ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಘೋಷಿಸಿದ್ದಾರೆ.

ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದು ತಿಳಿಸಿದರು.

ರಾಜ್ಯಾದ್ಯಂತ ಎಲ್ಕೆಜಿಯಿಂದ ದ್ವಿತೀಯ ಪಿಯುಸಿಯವರೆಗೆ ಒಂದೇ ಕಡೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು 1,000 ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಚಾಲನೆ ನೀಡಿದೆ.

ಈಗಾಗಲೇ 500 ಸರ್ಕಾರಿ ಶಾಲೆಗಳನ್ನು ಕೆಪಿಎಸ್ಗಳಾಗಿ ಉನ್ನತೀಕರಿಸಲು ʻಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ʼ ವತಿಯಿಂದ 1,750 ಕೋಟಿ ರೂ. ಗಳ ನೆರವು ಲಭಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರವು ಮುಂದಿನ ನಾಲ್ಕು ವರ್ಷಗಳಲ್ಲಿ 750 ಕೋಟಿ ರೂ. ಒದಗಿಸಲಿದೆ.

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸಮರ್ಥವಾಗಿ ಬಳಸಿಕೊಳ್ಳಲಾಗುತ್ತಿದ್ದು, ಶನಿವಾರ ಶಂಕುಸ್ಥಾಪನೆಗೊಂಡ ಕಟ್ಟಡ ನಿರ್ಮಾಣಕ್ಕೆ ʻಏಜಾಕ್ಸ್ ಇಂಜಿನಿಯರಿಂಗ್ ಲಿಮಿಟೆಡ್ʼ ವತಿಯಿಂದ 13.50 ಕೋಟಿ ರೂ. ದೇಣಿಗೆ ನೀಡಲಾಗಿದೆ.

ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಹಾಗೂ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಒಟ್ಟು 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯ ಎಲ್ಲ ಸೌಕರ್ಯಗಳನ್ನು ಒದಗಿಸುವುದಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ಬಾರಿಯ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ದಾಖಲೆ ಫಲಿತಾಂಶ ಬರಲು ನಾವು ತೆಗೆದುಕೊಂಡ ಕ್ರಮಗಳೇ ಕಾರಣ, ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande