
ಬಾಗಲಕೋಟೆ, 22 ಆಗಸ್ಟ್ (ಹಿ.ಸ.)
ಆ್ಯಂಕರ್ : ರೈತರ ಶ್ರಮ, ಸಾಧನೆ ಹಾಗೂ ಕೃಷಿ ಕ್ಷೇತ್ರಕ್ಕೆ ನೀಡುತ್ತಿರುವ ಮಹತ್ವದ ಕೊಡುಗೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಕೆ ಫೌಂಡೇಶನ್ ವತಿಯಿಂದ ಬಾಗಲಕೋಟೆ ನವನಗರದ ಕಲಾಭವನದಲ್ಲಿ ರೈತರ ವಿಚಾರ ಸಂಕಿರಣ ಹಾಗೂ ಜಿಲ್ಲಾ ಮಟ್ಟದ ರೈತ ಮತ್ತು ರೈತ ಮಹಿಳಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ಉಮೇಶ್ ಮೇಟಿ ಅವರು ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಯ್ಕೆಯಾದ ಸಾಧಕ ರೈತರು ಹಾಗೂ ರೈತ ಮಹಿಳೆಯರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಕೃಷಿ ಕ್ಷೇತ್ರದಲ್ಲಿ ತಮ್ಮದೇ ಆದ ರೀತಿಯಲ್ಲಿ ಸಾಧನೆ ಮಾಡಿ, ಇತರ ರೈತರಿಗೆ ಮಾದರಿಯಾಗಿರುವವರನ್ನು ಗುರುತಿಸಿ ಗೌರವಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಅವರು ಹೇಳಿದರು.
ಕೃಷಿ ಕ್ಷೇತ್ರವು ದೇಶದ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಯ ಪ್ರಮುಖ ಆಧಾರವಾಗಿದ್ದು, ರೈತರು ಎದುರಿಸುತ್ತಿರುವ ಸವಾಲುಗಳ ನಡುವೆಯೂ ಕೃಷಿಯಲ್ಲಿ ಹೊಸ ಪ್ರಯೋಗಗಳು, ಆಧುನಿಕ ತಂತ್ರಜ್ಞಾನ, ವೈಜ್ಞಾನಿಕ ಪದ್ಧತಿಗಳು ಹಾಗೂ ಉತ್ತಮ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಂಡು ಸಾಧನೆ ಮಾಡುತ್ತಿರುವ ರೈತರನ್ನು ಪ್ರೋತ್ಸಾಹಿಸುವ ಅಗತ್ಯವಿದೆ.
ಇಂತಹ ಪ್ರಶಸ್ತಿ ಹಾಗೂ ಸನ್ಮಾನಗಳು ರೈತರಲ್ಲಿ ಮತ್ತಷ್ಟು ಆತ್ಮವಿಶ್ವಾಸ ಮೂಡಿಸುವುದರ ಜತೆಗೆ ಕೃಷಿ ಕ್ಷೇತ್ರದಲ್ಲಿ ಹೊಸ ಸಾಧನೆ ಮಾಡಲು ಪ್ರೇರಣೆ ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.
ವಿಚಾರ ಸಂಕಿರಣದಲ್ಲಿ ಕೃಷಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಿತು. ರೈತರ ಸಮಸ್ಯೆಗಳು, ಕೃಷಿ ಕ್ಷೇತ್ರದಲ್ಲಿನ ಹೊಸ ಅವಕಾಶಗಳು, ಆಧುನಿಕ ಕೃಷಿ ಪದ್ಧತಿಗಳು ಹಾಗೂ ರೈತರ ಆರ್ಥಿಕ ಸಬಲೀಕರಣದ ಕುರಿತು ವಿಚಾರ ವಿನಿಮಯ ನಡೆಯಿತು. ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ರೈತರು ಮತ್ತು ರೈತ ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅನುಭವ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡರು.
ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ರೈತರು ಹಾಗೂ ರೈತ ಮಹಿಳೆಯರ ಕೃಷಿ ಕ್ಷೇತ್ರದಲ್ಲಿನ ಸಾಧನೆಯನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ತಮ್ಮ ಪರಿಶ್ರಮ, ಅನುಭವ ಹಾಗೂ ಹೊಸತನದ ಮೂಲಕ ಕೃಷಿ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿರುವ ಸಾಧಕರಿಗೆ ಸಾರ್ವಜನಿಕವಾಗಿ ಗೌರವ ಸಲ್ಲಿಸುವ ಮೂಲಕ ಅವರ ಸೇವೆಯನ್ನು ಗುರುತಿಸಲಾಯಿತು.
ಪ್ರಶಸ್ತಿ ಪಡೆದ ಜಿಲ್ಲೆಯ ಎಲ್ಲ ಸಾಧಕ ರೈತರು ಹಾಗೂ ರೈತ ಮಹಿಳೆಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಕೃಷಿಯಲ್ಲಿ ಮತ್ತಷ್ಟು ಯಶಸ್ಸು ಸಾಧಿಸಿ, ಜಿಲ್ಲೆಯ ಇತರ ರೈತರಿಗೆ ಪ್ರೇರಣೆಯಾಗಲಿ ಎಂಬ ಆಶಯವನ್ನು ಕಾರ್ಯಕ್ರಮದಲ್ಲಿ ವ್ಯಕ್ತಪಡಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande