ಶಿಗ್ಗಾವಿ ಹನುಮಾನ್ ದೇವಸ್ಥಾನ ಘಟನೆ: ಬೊಮ್ಮಾಯಿ ಆಕ್ರೋಶ
ಹಾವೇರಿ, 23 ಆಗಸ್ಟ್ (ಹಿ.ಸ.): ಆ್ಯಂಕರ್: ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಕ್ಕೆ ಭೇಟಿ
ಬೊಮ್ಮಾಯಿ


ಹಾವೇರಿ, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಉದ್ದೇಶಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಇದು ಅತ್ಯಂತ ಹೇಯ ಹಾಗೂ ಕ್ಷಮಿಸಲಾರದ ಕೃತ್ಯ. ಘಟನೆ ಉದ್ದೇಶಪೂರ್ವಕವಾಗಿದ್ದು, ಕೋಮು ಸೌಹಾರ್ದತೆ ಕದಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಆರೋಪಿ ವಿರುದ್ಧ ಗಂಭೀರ ತನಿಖೆ ನಡೆಸಿ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಶಿಗ್ಗಾವಿ–ಸವಣೂರು ಭಾಗದಲ್ಲಿ ಹಲವು ವರ್ಷಗಳಿಂದ ಕೋಮು ಸೌಹಾರ್ದತೆ ಕಾಪಾಡಿಕೊಂಡು ಬರಲಾಗಿದೆ. ಇಂತಹ ಘಟನೆಗಳಿಗೆ ಅವಕಾಶ ನೀಡಬಾರದು. ಆರೋಪಿಗೆ ಕಠಿಣ ಶಿಕ್ಷೆಯಾಗದಿದ್ದರೆ ಮತ್ತೆ ಇಂತಹ ಕೃತ್ಯಗಳು ನಡೆಯುವ ಸಾಧ್ಯತೆ ಇದೆ ಎಂದು ಬೊಮ್ಮಾಯಿ ಹೇಳಿದರು.

ಪ್ರಕರಣದ ಹಿನ್ನೆಲೆಯಲ್ಲಿ ಕರೆ ನೀಡಿರುವ ಶಿಗ್ಗಾವಿ ಬಂದ್‌ಗೆ ಎಲ್ಲ ಸಮುದಾಯಗಳ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಬೆಂಬಲ ನೀಡಬೇಕು. ಯಾವುದೇ ಕೋಮಿನ ವಿರುದ್ಧ ಈ ಬಂದ್ ಅಲ್ಲ; ಹಿಂಸಾಚಾರ ಮತ್ತು ಕೋಮು ಗಲಭೆ ನಡೆಯಬಾರದು ಎಂಬ ಉದ್ದೇಶದಿಂದ ಶಾಂತಿಯುತವಾಗಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರ ಮತ್ತು ಜಿಲ್ಲಾಡಳಿತ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂಬ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, “ಇದು ಕಾಂಗ್ರೆಸ್‌ನ ಅಧಃಪತನವನ್ನು ತೋರಿಸುತ್ತದೆ. ನಾವು ಈ ಮಣ್ಣಿನ ಅನ್ನ ತಿಂದಿದ್ದೇವೆ. ಹೀಗಾಗಿ ಸತ್ಯವನ್ನು ಮಾತನಾಡುತ್ತಿದ್ದೇವೆ” ಎಂದು ತಿರುಗೇಟು ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande