ಮಾಜಿ ಸಹಪಾಠಿ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
22 ವರ್ಷದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ
Death


ಬೆಂಗಳೂರು, 23 ಆಗಸ್ಟ್ (ಹಿ.ಸ.):

ಆ್ಯಂಕರ್:

ಮಾಜಿ ಕಾಲೇಜು ಸಹಪಾಠಿಯೊಬ್ಬನ ಕಿರುಕುಳಕ್ಕೆ ಬೇಸತ್ತ 22 ವರ್ಷದ ಯುವತಿ ಆಗರ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ.

ಮೃತ ಯುವತಿಯನ್ನು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳಮಕ್ಕಿ ಗ್ರಾಮದ ವಾಣಿ ಎಂದು ಗುರುತಿಸಲಾಗಿದೆ. ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ವಾಣಿ ನಗರದ ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಕಾಲೇಜು ಸಹಪಾಠಿ ಅಭಿಷೇಕ್ ಎ.ಎಸ್. ಎಂಬಾತ ವಾಣಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದನೆಂದು ಆರೋಪಿಸಲಾಗಿದೆ. ತನ್ನ ಮಾತು ಕೇಳದಿದ್ದರೆ ಕುಟುಂಬದ ಮರ್ಯಾದೆಗೆ ಧಕ್ಕೆ ತರುವುದಾಗಿ ಬೆದರಿಸುತ್ತಿದ್ದನೆಂದು ಯುವತಿ ಡೆತ್‌ನೋಟ್ ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.

ಕಿರುಕುಳದಿಂದ ನೊಂದ ವಾಣಿ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು. ತನ್ನ ಸಾವಿಗೆ ಅಭಿಷೇಕ್ ಕಾರಣ ಎಂದು ಆರೋಪಿಸಿ, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತು ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್ ಆಧರಿಸಿ ತನಿಖೆ ನಡೆಸಲಾಗುತ್ತಿದೆ. ತಲೆಮರೆಸಿಕೊಂಡಿರುವ ಆರೋಪಿ ಅಭಿಷೇಕ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande