ಮಹಿಳಾ ಸಬಲೀಕರಣವಿಲ್ಲದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಬಿ.ಕೆ. ಹರಿಪ್ರಸಾದ್
ಬೆಂಗಳೂರು, 23 ಆಗಸ್ಟ್ (ಹಿ.ಸ.): ಆ್ಯಂಕರ್:ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಹಿಳಾ ಸಬಲೀಕರಣ ಮತ್ತು ರಾಜಕೀಯ ಪ್ರಾತಿನಿಧ್ಯವಿಲ್ಲದೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ ಎ
ಬಿ.ಕೆ.ಹರಿಪ್ರಸಾದ


ಬೆಂಗಳೂರು, 23 ಆಗಸ್ಟ್ (ಹಿ.ಸ.):

ಆ್ಯಂಕರ್:ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಮಹಿಳಾ ಸಬಲೀಕರಣ ಮತ್ತು ರಾಜಕೀಯ ಪ್ರಾತಿನಿಧ್ಯವಿಲ್ಲದೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಳೆಯರಲ್ಲಿ ರಾಜಕೀಯ ಅರಿವು, ನಾಯಕತ್ವ ಗುಣ ಹಾಗೂ ಸ್ವಾಭಿಮಾನದ ಸ್ವಾವಲಂಬಿ ಬದುಕನ್ನು ಬೆಳೆಸಲು ಕಾಂಗ್ರೆಸ್ ಪಕ್ಷ ನಿರಂತರವಾಗಿ ಶ್ರಮಿಸುತ್ತಿದೆ. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಮಹಿಳೆಯರಿಗೆ ಘನತೆಯುತ ಬದುಕು ಕಲ್ಪಿಸುವುದು ಪಕ್ಷದ ಬದ್ಧತೆಯಾಗಿದೆ ಎಂದರು.

ಮಹಿಳೆಯರ ಅಭಿವೃದ್ಧಿಯೇ ದೇಶದ ಅಭಿವೃದ್ಧಿಯ ಮಾನದಂಡ ಎಂಬ ಅಂಬೇಡ್ಕರ್ ಅವರ ನಿಲುವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳಬೇಕು. ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಸಮಾನ ಅವಕಾಶ ದೊರೆಯುವ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು.

ಮಹಿಳೆಯರು ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ವಹಿಸಬೇಕು. ಸಂವಿಧಾನದ ಆಶಯಗಳಿಗೆ ಧಕ್ಕೆ ಬಂದರೆ ಮಹಿಳೆಯರು ಮತ್ತೆ ಹಕ್ಕುಗಳಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಮಹಿಳಾ ಕಾಂಗ್ರೆಸ್ ಸದಸ್ಯರು ಸಂವಿಧಾನ, ದೇಶದ ಇತಿಹಾಸ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಅಧ್ಯಯನ ಮಾಡಿ ರಾಜಕೀಯವಾಗಿ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ರಾಜಕೀಯದಲ್ಲಿ ಪ್ರಾತಿನಿಧ್ಯ ನೀಡಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ ಕಲ್ಪಿಸುವ ಮೂಲಕ ರಾಜಕೀಯ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದೆ. ಮಹಿಳೆಯರ ಆಸ್ತಿ ಹಕ್ಕು ಸೇರಿದಂತೆ ಹಲವು ಕಾನೂನು ಸುಧಾರಣೆಗಳಿಗೆ ಕಾಂಗ್ರೆಸ್ ಸರ್ಕಾರಗಳು ಕೊಡುಗೆ ನೀಡಿವೆ ಎಂದು ಹೇಳಿದರು.

ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು. ಪಕ್ಷದ ಹೋರಾಟ ಕೇವಲ ಅಧಿಕಾರಕ್ಕಾಗಿ ಸೀಮಿತವಾಗದೆ ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವ ಬಲಪಡಿಸುವ ಉದ್ದೇಶ ಹೊಂದಿರಬೇಕು ಎಂದು ಹರಿಪ್ರಸಾದ್ ಹೇಳಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಸೇರಿದಂತೆ ಹಲವು ಮಹಿಳಾ ಮುಖಂಡರು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande