
ಬಾಗಲಕೋಟೆ, 24 ಆಗಸ್ಟ್ (ಹಿ.ಸ.)
ಆ್ಯಂಕರ್ : ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆಗ್ರಹಿಸಿ ಹಾಗೂ ಮಳೆಯಿಂದ ಗ್ರಾಮದಲ್ಲಿ ಉಂಟಾಗಿರುವ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಕೊಣ್ಣೂರು ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸೋಮವಾರ ಮಳೆ ಸುರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ಗ್ರಾಮಸ್ಥರು ಡಿಸಿ ಕಚೇರಿ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ಹಲವು ವರ್ಷಗಳಿಂದ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಮಳೆಗಾಲ ಆರಂಭವಾಗುತ್ತಿದ್ದಂತೆ ಕೊಣ್ಣೂರು ಗ್ರಾಮದಲ್ಲಿ ರಸ್ತೆಗಳು ಕೆಸರುಮಯವಾಗುತ್ತಿದ್ದು, ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಮಳೆ ನೀರು ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳಿಗೆ ನುಗ್ಗುತ್ತಿದೆ. ಇದರಿಂದ ಗ್ರಾಮಸ್ಥರು, ಮಕ್ಕಳು, ವೃದ್ಧರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಅವರು ದೂರಿದರು.
ಗ್ರಾಮದ ಪ್ರಮುಖ ರಸ್ತೆಗಳ ಅಭಿವೃದ್ಧಿ, ಸಮರ್ಪಕ ಚರಂಡಿ ನಿರ್ಮಾಣ, ಮಳೆ ನೀರು ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು. ಮಳೆ ಬಂದಾಗ ಗ್ರಾಮದಲ್ಲಿ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದ್ದು, ಕೆಲವೆಡೆ ಕೆಸರು ಮತ್ತು ನೀರು ನಿಂತು ಜನಜೀವನ ಅಸ್ತವ್ಯಸ್ತವಾಗುತ್ತಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
“ಗ್ರಾಮದ ಅಭಿವೃದ್ಧಿಗಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ. ಸಮಸ್ಯೆಗಳನ್ನು ಪರಿಹರಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ” ಎಂದು ಗ್ರಾಮಸ್ಥ ಉಳಿವೆಪ್ಪ ಶೆಟ್ಟರ್ ಎಚ್ಚರಿಕೆ ನೀಡಿದರು.
ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಗ್ರಾಮಸ್ಥರು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಕೊಣ್ಣೂರು ಗ್ರಾಮದ ಬಹುಕಾಲದ ಮೂಲಭೂತ ಸೌಕರ್ಯಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande