
ಬಾಗಲಕೋಟೆ, 24 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಿ.ವಿ.ವಿ.ಎಸ್. ಪಾಲಿಟೆಕ್ನಿಕ್ನ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆ , ನವದೆಹಲಿ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಭಾಜನರಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಬಾಗಲಕೋಟೆ ನಗರದ ಬಿ.ವಿ.ವಿ.ಎಸ್. ಪಾಲಿಟೆಕ್ನಿಕ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಕುಮಾರ ಶಶಿಧರ ಜಡಿಮಠ ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಕುಮಾರ ವಿವೇಕ ಮಾಲಪಾಣಿ ಅವರು ರಾಜ್ಯಮಟ್ಟದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಾಂಶುಪಾಲ ಈಶ್ವರ ದಂಡಿ ತಿಳಿಸಿದರು.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ, ತಾಂತ್ರಿಕ ಜ್ಞಾನ, ಪ್ರತಿಭೆ, ವಿವಿಧ ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೋರಿದ ಉತ್ತಮ ಪ್ರದರ್ಶನವನ್ನು ಪರಿಗಣಿಸಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯದ ವಿವಿಧ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳ ನಡುವೆ ಇವರ ಸಾಧನೆ ಗುರುತಿಸಲ್ಪಟ್ಟಿರುವುದು ಬಿ.ವಿ.ವಿ.ಎಸ್. ಪಾಲಿಟೆಕ್ನಿಕ್ಗೆ ಹೆಮ್ಮೆಯ ಸಂಗತಿಯಾಗಿದೆ.
ಬೀದರ್ನ ಲಿಂಗರಾಜ ಅಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ 22ನೇ ರಾಜ್ಯಮಟ್ಟದ ತಾಂತ್ರಿಕ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು. ಈ ಸಂದರ್ಭದಲ್ಲಿ ಶಶಿಧರ ಜಡಿಮಠ ಹಾಗೂ ವಿವೇಕ ಮಾಲಪಾಣಿ ಅವರಿಗೆ ರಾಜ್ಯಮಟ್ಟದ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ರಾಜ್ಯಮಟ್ಟದ ತಾಂತ್ರಿಕ ವಿದ್ಯಾರ್ಥಿಗಳ ಸಮ್ಮೇಳನದಲ್ಲಿ ವಿವಿಧ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಈ ವೇದಿಕೆಯಲ್ಲಿ ಬಿ.ವಿ.ವಿ.ಎಸ್. ಪಾಲಿಟೆಕ್ನಿಕ್ನ ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವುದು ಸಂಸ್ಥೆಯ ಶೈಕ್ಷಣಿಕ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಪ್ರತಿಭೆಗೆ ದೊರೆತ ಮಾನ್ಯತೆಯಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಬಿ.ವಿ.ವಿ. ಸಂಘದ ಮಾನ್ಯ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಸಂಘದ ಗೌರವಾನ್ವಿತ ಸದಸ್ಯರು, ಸಂಸ್ಥೆಯ ಪ್ರಾಚಾರ್ಯರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿರುವ ಅವರು, ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಸ್ತು, ಅಧ್ಯಯನದ ಮೇಲಿನ ಆಸಕ್ತಿ ಹಾಗೂ ಉಪನ್ಯಾಸಕರ ಮಾರ್ಗದರ್ಶನದಿಂದ ಇಂತಹ ಸಾಧನೆ ಸಾಧ್ಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಸಂಸ್ಥೆ ಹಾಗೂ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಶುಭ ಹಾರೈಸಿದ್ದಾರೆ.
ಇಬ್ಬರು ವಿದ್ಯಾರ್ಥಿಗಳ ರಾಜ್ಯಮಟ್ಟದ ಸಾಧನೆಗೆ ಬಿ.ವಿ.ವಿ.ಎಸ್. ಪಾಲಿಟೆಕ್ನಿಕ್ನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ಸಹಪಾಠಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande