
ಬಾಗಲಕೋಟೆ, 26 ಆಗಸ್ಟ್ (ಹಿ.ಸ.)
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ವಿವಿಧ ಅವ್ಯವಸ್ಥೆಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹೋರಾಟಗಾರರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಅವರ ಸಂಬಂಧಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ಪ್ರತಿಭಟನೆ ನಡೆಸಿದರು.
ಆಸ್ಪತ್ರೆಯಲ್ಲಿನ ಸ್ವಚ್ಛತೆ, ಮೂಲಭೂತ ಸೌಕರ್ಯ, ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಹೋರಾಟಗಾರರಿಗೆ ಸಮಜಾಯಿಷಿ ನೀಡಲು ಮುಂದಾದರು. ಈ ವೇಳೆ ಅಧಿಕಾರಿಗಳ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರ ಪ್ರಕಾಶ್, ಆಸ್ಪತ್ರೆಯ ಅವ್ಯವಸ್ಥೆಗಳ ಕುರಿತು ಇದುವರೆಗೂ ಹಲವು ಬಾರಿ ಗಮನ ಸೆಳೆದಿದ್ದರೂ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದರು.
‘ಸಮಸ್ಯೆಗಳನ್ನು ಬಗೆಹರಿಸಲಾಗುವುದು’ ಎಂಬ ಭರವಸೆ ನೀಡುವುದರಿಂದ ಮಾತ್ರ ಸಾರ್ವಜನಿಕರ ಸಮಸ್ಯೆಗಳು ಪರಿಹಾರವಾಗುವುದಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬರುವ ಬಡವರು ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕ ಆರೋಗ್ಯ ಸೇವೆ ದೊರೆಯುವಂತೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಅಧಿಕಾರಿಗಳು ಸ್ಪಷ್ಟ ಉತ್ತರ ನೀಡಬೇಕು ಹಾಗೂ ನಿಗದಿತ ಅವಧಿಯಲ್ಲಿ ಅವ್ಯವಸ್ಥೆಗಳನ್ನು ಸರಿಪಡಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸಮಸ್ಯೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande