
ಬೆಂಗಳೂರು, 26 ಆಗಸ್ಟ್ (ಹಿ.ಸ.):
ಆ್ಯಂಕರ್:
ರಾಜಧಾನಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಉತ್ತರ ಪ್ರದೇಶದ ಲಖನೌನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣದ ವೇಳೆ ಶೌಚಾಲಯದ ಬಳಿ ಬೆದರಿಕೆ ಸಂದೇಶವಿರುವ ಪತ್ರ ಪತ್ತೆಯಾಗಿದೆ. ಕೂಡಲೇ ಸಿಬ್ಬಂದಿ ಪೈಲಟ್‌ಗೆ ಮಾಹಿತಿ ನೀಡಿದ್ದು, ಪೈಲಟ್ ತಕ್ಷಣ ವಿಮಾನ ಸಂಚಾರ ನಿಯಂತ್ರಣ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಿದ್ದಾರೆ.
ವಿಮಾನವು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಕೆಳಗಿಳಿಸಲಾಯಿತು. ಬಳಿಕ ಬಾಂಬ್ ನಿಷ್ಕ್ರಿಯ ದಳ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಶ್ವಾನದಳ ಹಾಗೂ ವಿಮಾನ ನಿಲ್ದಾಣದ ಪೊಲೀಸರು ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಭದ್ರತಾ ಸಂಸ್ಥೆಗಳು ಹಾಗೂ ಪೊಲೀಸರು ಬೆದರಿಕೆ ನಿಜವೇ ಅಥವಾ ಹುಸಿ ಬೆದರಿಕೆಯೇ ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆದರಿಕೆ ಪತ್ರ ಬರೆದ ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R