
ಬೆಂಗಳೂರು, 26 ಆಗಸ್ಟ್ (ಹಿ.ಸ.):
ಆ್ಯಂಕರ್:
ಬೆಂಗಳೂರಿನ ಜಯನಗರ 3ನೇ ಬಡಾವಣೆಯಲ್ಲಿರುವ ಎನ್.ಎಂ.ಕೆ.ಆರ್.ವಿ. ಕಾಲೇಜಿನ ಸಹಯೋಗದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಅಂಗಳದಲ್ಲಿ ತಿಂಗಳ ಪುಸ್ತಕ ಯೋಜನೆಯಡಿ, ಖ್ಯಾತ ಸಾಹಿತಿ ಯಶವಂತ ಚಿತ್ತಾಲರ ಕಥೆಗಳ ಕುರಿತು ವಿಶೇಷ ಉಪನ್ಯಾಸ ಹಾಗೂ ಸಾಹಿತ್ಯಿಕ ಸಂವಾದ ಕಾರ್ಯಕ್ರಮವು ಆಗಸ್ಟ್ 27ರಂದು ಬೆಳಿಗ್ಗೆ 11:00 ಗಂಟೆಗೆ ಕಾಲೇಜಿನ ಶಾಶ್ವತಿ ಸಭಾಂಗಣದಲ್ಲಿ ನಡೆಯಲಿದೆ.
ಸಾಹಿತ್ಯಾಸಕ್ತರು ಹಾಗೂ ವಿದ್ಯಾರ್ಥಿಗಳಲ್ಲಿ ಓದಿನ ಅಭಿರುಚಿಯನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿರುವ ಈ ಸಮಾರಂಭವನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಉದ್ಘಾಟಿಸಲಿದ್ದಾರೆ. ಎನ್.ಎಂ.ಕೆ.ಆರ್.ವಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಚಿತ್ರಾ ಆರ್. ಅವರು ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಪ್ರಸಿದ್ಧ ಪತ್ರಕರ್ತರು ಹಾಗೂ ಖ್ಯಾತ ಲೇಖಕರಾದ ಬಿ.ಎಂ. ಹನೀಫ್ ಅವರು 'ಚಿತ್ತಾಲರ ಕಥೆಗಳು' ವಿಷಯದ ಕುರಿತು ವಿಶೇಷ ಮುಖ್ಯ ಉಪನ್ಯಾಸವನ್ನು ನೀಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಸಂಧ್ಯಾ ಹೆಗಡೆ ಹಾಗೂ ಅಧ್ಯಾಪಕಿ ಶ್ರೀಮತಿ ಸುಮನ ಎ.ಎಸ್. ಅವರುಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R