ಗ್ರಾಮೀಣಾಭಿವೃದ್ಧಿ ಇಲಾಖೆ ಎಇಇ ನೇಮಕಾತಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಎಚ್.ಡಿ. ಕುಮಾರಸ್ವಾಮಿ ಆಗ್ರಹ
ಬೆಂಗಳೂರು, 28 ಆಗಸ್ಟ್ (ಹಿ.ಸ.): ಆ್ಯಂಕರ್: ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಕ್ರಮದ ಆರೋಪಗಳಿದ್ದರೂ 24 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲ
HDK


ಬೆಂಗಳೂರು, 28 ಆಗಸ್ಟ್ (ಹಿ.ಸ.):

ಆ್ಯಂಕರ್:

ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ) ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಅಕ್ರಮದ ಆರೋಪಗಳಿದ್ದರೂ 24 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ ಎಂದು ಆರೋಪಿಸಿದ ಅವರು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಅಂದಿನ ಗ್ರಾಮೀಣಾಭಿವೃದ್ಧಿ ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಕುಮಾರಸ್ವಾಮಿ, ಎಇಇ ನೇಮಕಾತಿಯಲ್ಲಿ ಒಎಂಆರ್‌ ತಿದ್ದುಪಡಿ ಸೇರಿದಂತೆ ವಿವಿಧ ಹಂತಗಳಲ್ಲಿ ಅಕ್ರಮ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಹೇಳಿದರು. ಅಂದಿನ ಕೆಪಿಎಸ್‌ಸಿ ಕಾರ್ಯದರ್ಶಿ ಸೇರಿದಂತೆ ಹಲವು ಹಂತಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದರು.

ಪ್ರಕರಣದ ತನಿಖೆಗಾಗಿ ಕೆಪಿಎಸ್‌ಸಿ ರಚಿಸಿದ್ದ ಮೂರು ಸದಸ್ಯರ ಉಪ ಸಮಿತಿ ಶಿಫಾರಸು ಮಾಡದಿದ್ದರೂ ಹಾಗೂ ಆಯೋಗದ ಅನುಮತಿ ಇಲ್ಲದಿದ್ದರೂ ಅಂತಿಮ ಪಟ್ಟಿ ಬಿಡುಗಡೆಗೆ ಒತ್ತಡ ಹೇರಲಾಗಿತ್ತು ಎಂದು ಕುಮಾರಸ್ವಾಮಿ ಆರೋಪಿಸಿದರು. ಪ್ರಕರಣ ನ್ಯಾಯಾಲಯದ ಮುಂದಿದ್ದಾಗಲೂ ನೇಮಕಾತಿ ಪತ್ರಗಳನ್ನು ನೀಡಿದ್ದು ಏಕೆ ಎಂದು ಪ್ರಶ್ನಿಸಿದರು.

2023ರ ಸೆಪ್ಟೆಂಬರ್ 25ರಂದು ಅಭ್ಯರ್ಥಿಯಾಗಿದ್ದ ಆನಂದ್ ಎಸ್. ಸಿದ್ದರೆಡ್ಡಿ ಅವರು ಕೆಪಿಎಸ್‌ಸಿ ಕಾರ್ಯದರ್ಶಿಗೆ ಅಕ್ರಮದ ಕುರಿತು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಉಪ ಸಮಿತಿ ತನಿಖೆ ನಡೆಸಿತ್ತು. ಇದೇ ಅಭ್ಯರ್ಥಿ ನ್ಯಾಯಾಲಯದ ಮೊರೆ ಹೋಗಿದ್ದು, ಪ್ರಕರಣದ ಅಂತಿಮ ಆದೇಶದವರೆಗೆ ನೇಮಕಾತಿ ಪತ್ರ ನೀಡಬಾರದು ಎಂದು ನ್ಯಾಯಾಲಯ ಸೂಚಿಸಿತ್ತು ಎಂದು ಕುಮಾರಸ್ವಾಮಿ ಹೇಳಿದರು.

ಅಕ್ರಮದ ಆರೋಪ ಎದುರಿಸುತ್ತಿದ್ದ 24 ಅಭ್ಯರ್ಥಿಗಳು ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದಾರೆ. ಒಎಂಆರ್‌ ತಿದ್ದುಪಡಿ ಸೇರಿದಂತೆ ಅಕ್ರಮ ನಡೆದಿರುವ ವರದಿ ಇದ್ದರೂ ಈ ಬಗ್ಗೆ ಸಚಿವರು ಏಕೆ ಮಾತನಾಡುತ್ತಿಲ್ಲ? ಯಾರಿಗೆ ಕಿಕ್‌ಬ್ಯಾಕ್ ಹೋಗಿದೆ ಎಂಬುದನ್ನು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಕೆಪಿಎಸ್‌ಸಿ ಹಾಗೂ ನೇಮಕಾತಿ ವ್ಯವಸ್ಥೆಯ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ಸರ್ಕಾರ ನೇಮಕಾತಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ‘ಬೇಲಿ ಎದ್ದು ಹೊಲ ಮೇಯ್ದ’ ರೀತಿಯಲ್ಲಿ ವ್ಯವಸ್ಥೆಯೇ ಅಕ್ರಮಕ್ಕೆ ಕಾರಣವಾಗಬಾರದು ಎಂದು ಟೀಕಿಸಿದರು.

ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರ ವಿಚಾರವನ್ನೂ ಪ್ರಸ್ತಾಪಿಸಿದ ಕುಮಾರಸ್ವಾಮಿ, ಇ.ಡಿ. ದಾಳಿ ಬಳಿಕ ಅವರು ಎಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಆರೋಪಿಸಿದರು. ಪಶುವೈದ್ಯಕೀಯ ಇಲಾಖೆಯ ನೇಮಕಾತಿಯಲ್ಲಿ 80 ಲಕ್ಷ ರೂ. ನಿಗದಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಆರಂಭವಾಗಿತ್ತು ಎಂದು ಹೇಳಿದರು.

ಅನಾರೋಗ್ಯದ ಕಾರಣ ಊರಿಗೆ ತೆರಳಿರುವುದಾಗಿ ಅಧಿಕಾರಿ ತಿಳಿಸಿದ್ದರು ಎಂದು ಈ ಹಿಂದೆ ಹೇಳಲಾಗಿತ್ತು. ಆದರೆ ಆಗಸ್ಟ್ 25ರಂದು ಅವರು ಎಲ್ಲಿದ್ದಾರೆ ಎಂಬುದೇ ಗೊತ್ತಿಲ್ಲ ಎನ್ನಲಾಗಿದೆ. ಗೃಹ ಇಲಾಖೆಗೆ ಅಧಿಕಾರಿಯ ಇರುವಿಕೆ ಬಗ್ಗೆ ಮಾಹಿತಿ ಇಲ್ಲದಿದ್ದರೆ ಇಲಾಖೆ ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, “ನನ್ನ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ” ಎಂದರು. ಸರ್ಕಾರ 75 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯಲ್ಲೇ ಅಕ್ರಮದ ಆರೋಪಗಳು ಕೇಳಿಬರುತ್ತಿವೆ ಎಂದು ಟೀಕಿಸಿದರು.

ಕೆಂಪಣ್ಣ ಆಯೋಗ, ಜಯಚಂದ್ರ ಆಯೋಗದ ವರದಿಗಳ ಸ್ಥಿತಿ ಏನು ಹಾಗೂ 2024ರ ನೇಮಕಾತಿ ಅಕ್ರಮಗಳ ಕುರಿತು ನಡೆದ ಸಿಐಡಿ ತನಿಖೆಯಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande