
ವಿಜಯಪುರ, 28 ಆಗಸ್ಟ್ (ಹಿ.ಸ.)
ಆ್ಯಂಕರ್ : ವಿಜಯಪುರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ವಿಜಯಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಹಾಗೂ ನೆರವು ಒದಗಿಸಬೇಕು.
ಇಲ್ಲವಾದರೆ ಜಿಲ್ಲೆಯ ಸಚಿವರು ಹಾಗೂ ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಸಂದೀಪ ಝಳಕಿ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ಚಟುವಟಿಕೆಗಳು ತೀವ್ರವಾಗಿ ಹಿನ್ನಡೆ ಕಂಡಿವೆ.
ಬಿತ್ತನೆ ಮಾಡಿದ ರೈತರು ಮಳೆಯ ನಿರೀಕ್ಷೆಯಲ್ಲಿದ್ದು, ಬೆಳೆಗಳು ಒಣಗುವ ಆತಂಕ ಎದುರಾಗಿದೆ. ಈಗಾಗಲೇ ಕೃಷಿ ಕಾರ್ಯಗಳಿಗೆ ಹಣ ಖರ್ಚು ಮಾಡಿರುವ ರೈತರು ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ ಎಂದು ಹೇಳಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಹವಾಮಾನ ವೈಪರೀತ್ಯದಿಂದ ರೈತರ ಬದುಕು ದುಸ್ತರವಾಗಿದೆ. ಮಳೆಯನ್ನೇ ಅವಲಂಬಿಸಿರುವ ರೈತರಿಗೆ ಈ ಪರಿಸ್ಥಿತಿ ದೊಡ್ಡ ಹೊಡೆತ ನೀಡಿದೆ. ಬೆಳೆ ನಷ್ಟದ ಆತಂಕ ಒಂದೆಡೆಯಾದರೆ, ಮತ್ತೊಂದೆಡೆ ಕೃಷಿ ಸಾಲ, ಬೀಜ, ರಸಗೊಬ್ಬರ ಹಾಗೂ ಕೃಷಿ ಕಾರ್ಮಿಕರ ವೆಚ್ಚದ ಹೊರೆ ರೈತರನ್ನು ಕಂಗೆಡಿಸಿದೆ ಎಂದು ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬರದ ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಕೇವಲ ಕಚೇರಿ ಮಟ್ಟದ ವರದಿಗಳಿಗೆ ಸೀಮಿತವಾಗದೆ, ಜಿಲ್ಲೆಯಲ್ಲಿ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಬೇಕು. ಅಧಿಕಾರಿಗಳ ಮೂಲಕ ಸಮಗ್ರ ಬೆಳೆ ಸಮೀಕ್ಷೆ ನಡೆಸಿ, ಮಳೆ ಕೊರತೆ ಹಾಗೂ ಬೆಳೆ ಹಾನಿಯ ನೈಜ ಚಿತ್ರಣವನ್ನು ಸರ್ಕಾರದ ಗಮನಕ್ಕೆ ತರಬೇಕು ಎಂದು ಸಂದೀಪ ಝಳಕಿ ಒತ್ತಾಯಿಸಿದರು.
ವಿಜಯಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಿ, ಅರ್ಹ ರೈತರಿಗೆ ಬೆಳೆ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಅಗತ್ಯವಿರುವ ಇತರೆ ನೆರವು ಒದಗಿಸಬೇಕು. ರೈತರ ಸಾಲದ ಒತ್ತಡ ಕಡಿಮೆ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಸೇರಿದಂತೆ ರೈತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರೈತರ ಸಂಕಷ್ಟದ ಸಂದರ್ಭದಲ್ಲಿ ಜನಪ್ರತಿನಿಧಿಗಳು ರೈತರ ಪರವಾಗಿ ಧ್ವನಿ ಎತ್ತಬೇಕು. ಸರ್ಕಾರದ ಮೇಲೆ ಒತ್ತಡ ತಂದು ಜಿಲ್ಲೆಗೆ ವಿಶೇಷ ಬರ ಪರಿಹಾರ ಪ್ಯಾಕೇಜ್ ತರಲು ಸಚಿವರು ಮತ್ತು ಶಾಸಕರು ಮುಂದಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲರಾದರೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಜನರ ಮುಂದೆ ನಿಲ್ಲಬೇಕು ಎಂದು ಸಂದೀಪ ಝಳಕಿ ಹೇಳಿದರು.
ಜಿಲ್ಲೆಯ ರೈತರ ಹಿತವನ್ನು ಕಡೆಗಣಿಸದೆ ಸರ್ಕಾರ ತಕ್ಷಣವೇ ಬರಪೀಡಿತ ತಾಲ್ಲೂಕುಗಳ ಘೋಷಣೆ ಮಾಡಿ, ಪರಿಹಾರ ಕಾರ್ಯಗಳನ್ನು ಆರಂಭಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಳಂಬವಾದರೆ ಬಿಜೆಪಿ ವತಿಯಿಂದ ಹೋರಾಟ ರೂಪಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / jyothi deshpande