ಜೈಕಾರಕ್ಕಿಂತ ಅಂಬೇಡ್ಕರ್ರ ಸಮಾನತೆಯ ಆಶಯ ಅನುಷ್ಠಾನ ಮುಖ್ಯ: ಕೃಷ್ಣಭೈರೇಗೌಡ
ಅಂಬೇಡ್ಕರ್ ಮೂರ್ತಿಗೆ ಹೂಮಾಲೆ ಹಾಕಿ ಜೈಕಾರ ಕೂಗಿದರೆ ಸಾಲದು,
Equality and Equal Living Matter More Than Mere Slogans: Minister Krishna Byre Gowda


ಬೆಂಗಳೂರು, 28 ಆಗಸ್ಟ್ (ಹಿ.ಸ.):

ಆ್ಯಂಕರ್:

ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಹೂಮಾಲೆ ಹಾಕಿ ಜೈಕಾರ ಕೂಗಿದರೆ ಮಾತ್ರ ಸಾಲದು, ಸಮಾಜದಲ್ಲಿ ಎಲ್ಲರಿಗೂ ಸಮಾನತೆಯ ಬದುಕು ಸಾಧ್ಯವಾದಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವತಿಯಿಂದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‍ ಕುಮಾರ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 'ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ–2026' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದಕ್ಕೂ ಮುಂಚಿತವಾಗಿ ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಲಾಯಿತು.

ಮಾನವತಾ ಧರ್ಮದ ಪ್ರತಿಪಾದನೆ:ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸಚಿವರು, ಡಾ. ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ, ಬದಲಾಗಿ ಎಲ್ಲಾ ಸಮುದಾಯಗಳ ಏಳಿಗೆಗೆ ಬೆಳಕಾದವರು ಎಂದರು. ಬುದ್ಧನ ಕಾಲದಿಂದಲೂ ನಮ್ಮ ದೇಶದಲ್ಲಿ ಮಾನವ ಧರ್ಮದ ಪರಂಪರೆ ಜೀವಂತವಾಗಿದ್ದು, ಎಲ್ಲ ಮನುಷ್ಯರೂ ಒಂದೇ ಎಂಬ ಅರಿವು ನಮ್ಮಲ್ಲಿರಬೇಕು ಎಂದು ಅಭಿಪ್ರಾಯಪಟ್ಟರು. ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಮನೋಭಾವಕ್ಕೆ ಯಾರೂ ಅವಕಾಶ ನೀಡಬಾರದು ಎಂದು ಕರೆ ನೀಡಿದರು.

ಪೌರಕಾರ್ಮಿಕರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ:ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪೌರಕಾರ್ಮಿಕರ ವಿವಿಧ ಬೇಡಿಕೆ ಹಾಗೂ ಕುಂದುಕೊರತೆಗಳ ಕುರಿತು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಸಚಿವರು ಭರವಸೆ ನೀಡಿದರು. ಪೌರಕಾರ್ಮಿಕರ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅವುಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande