ಸೆ.1ರಂದು ಸಿಎಂ ಡಿ.ಕೆ. ಶಿವಕುಮಾರ ಗದಗ ಜಿಲ್ಲಾ ಪ್ರವಾಸ
ಗದಗ, 29 ಆಗಸ್ಟ್ (ಹಿ.ಸ.) ಆ್ಯಂಕರ್:- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅವಲೋಕನ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿ ಸಿ.
ಫೋಟೋ


ಗದಗ, 29 ಆಗಸ್ಟ್ (ಹಿ.ಸ.)

ಆ್ಯಂಕರ್:- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸೆಪ್ಟೆಂಬರ್ 1ರಂದು ಗದಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅವಲೋಕನ ಸಭೆ ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.

ಜಿಲ್ಲಾಡಳಿತ ಭವನದಲ್ಲಿ ಶನಿವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ ನಡೆದಿದ್ದು, ಮುಖ್ಯಮಂತ್ರಿಗಳ ಪ್ರವಾಸದ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಮುಖ್ಯಮಂತ್ರಿಗಳು ಸೆ.1ರಂದು ಹುಬ್ಬಳ್ಳಿಯಿಂದ ಗದಗಕ್ಕೆ ಆಗಮಿಸಿ, ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಅವಲೋಕನ ಸಭೆ ನಡೆಸಲಿದ್ದಾರೆ. ಬಳಿಕ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದು, ನಂತರ ಲಕ್ಷ್ಮೇಶ್ವರಕ್ಕೆ ತೆರಳಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳ ಪ್ರವಾಸದ ಎಲ್ಲ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಬರ ಪರಿಸ್ಥಿತಿ, ಕೃಷಿ ಚಟುವಟಿಕೆಗಳು, ಬೆಳೆ ಹಾನಿ, ಕುಡಿಯುವ ನೀರಿನ ಸಮಸ್ಯೆ, ಬರ ನಿರ್ವಹಣೆಗೆ ಕೈಗೊಂಡಿರುವ ಕ್ರಮಗಳು ಸೇರಿದಂತೆ ಪ್ರತಿಯೊಂದು ಇಲಾಖೆಗೆ ಸಂಬಂಧಿಸಿದ ಸಂಪೂರ್ಣ, ನಿಖರ ಹಾಗೂ ವಾಸ್ತವಾಂಶದ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ತಮ್ಮ ಇಲಾಖೆಗೆ ಸಂಬಂಧಿಸಿದ ಅಗತ್ಯ ದಾಖಲೆಗಳು ಮತ್ತು ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಯಾವುದೇ ಮಾಹಿತಿ ಅಪೂರ್ಣವಾಗದಂತೆ ಮುಂಚಿತವಾಗಿಯೇ ಪರಿಶೀಲಿಸಿಕೊಂಡು ಸಿದ್ಧಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಇದರೊಂದಿಗೆ ಭಾರತ್ ಜೋಡೋ ಯುವ ಸಂಘಗಳು, ಪ್ರಜಾ ಸೇವೆ ಹಾಗೂ ಪ್ರತಿ ಶನಿವಾರ ನಡೆಯುತ್ತಿರುವ ಜನಸ್ಪಂದನ ಸಭೆಗಳಿಗೆ ಸಂಬಂಧಿಸಿದ ಮಾಹಿತಿಯನ್ನೂ ಸಿದ್ಧಪಡಿಸಿಕೊಂಡು ಸಂಬಂಧಿತ ಅಧಿಕಾರಿಗಳು ಸಭೆಯಲ್ಲಿ ಹಾಜರಿರಬೇಕು ಎಂದು ಹೇಳಿದರು.

ಶಿಷ್ಟಾಚಾರ, ಸಂಚಾರ ವ್ಯವಸ್ಥೆಗೆ ಆದ್ಯತೆ

ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಶಿಷ್ಟಾಚಾರಕ್ಕೆ ಕಟ್ಟುನಿಟ್ಟಿನ ಆದ್ಯತೆ ನೀಡಬೇಕು. ಮುಖ್ಯಮಂತ್ರಿಗಳು ಗದಗ ಜಿಲ್ಲೆಯ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿ ತೆರಳುವವರೆಗೆ ಯಾವುದೇ ರೀತಿಯ ಸಂಚಾರ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮಾತನಾಡಿ, ಮುಖ್ಯಮಂತ್ರಿಗಳ ಪ್ರವಾಸದ ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಪ್ರಮುಖ ಆದ್ಯತೆ ನೀಡಲಾಗುವುದು. ಮುಖ್ಯಮಂತ್ರಿಗಳ ಸಂಚಾರ ಮಾರ್ಗದಲ್ಲಿ ವಾಹನ ಸಂಚಾರ ಸುಗಮವಾಗಿರುವಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಹಾಗೂ ಸಂಚಾರ ವ್ಯವಸ್ಥೆ ಕೈಗೊಳ್ಳಲಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ್ ಕೆ.ಆರ್. ಅವರು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಡಿಡಿಎಲ್ಆರ್ ಜಿ.ಜೆ. ರುದ್ರಣ್ಣಗೌಡ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ್ ಸೋಮನಕಟ್ಟಿ, ಡಿಡಿಪಿಐ ಆರ್.ಎಸ್. ಬುರಡಿ, ಆರ್ಟಿಓ ವಿಶಾಲ್, ರಾಜಾರಾಮ್ ಪವರ್, ವಸಂತ ಮಡ್ಲೂರ, ಕೊಟ್ರೇಶ್ ವಿಭೂತಿ, ಶರಣು ಗೊಗೇರಿ, ಡಾ. ಎಚ್.ಬಿ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande