
ಗದಗ, 29 ಆಗಸ್ಟ್ (ಹಿ.ಸ.)
ಆ್ಯಂಕರ್:- ರಾಷ್ಟ್ರೀಯ ವೈದ್ಯಕೀಯ ವಿಜ್ಞಾನಗಳ ಪರೀಕ್ಷಾ ಮಂಡಳಿ ವತಿಯಿಂದ ಆಗಸ್ಟ್ 30ರಂದು ನಡೆಯಲಿರುವ ನೀಟ್-ಪಿಜಿ 2026 ಪರೀಕ್ಷೆಯನ್ನು ಸುಗಮವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಮುತ್ತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಲಕ್ಷ್ಮೇಶ್ವರದ ಸವಣೂರು ರಸ್ತೆಯಲ್ಲಿರುವ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಆಗಸ್ಟ್ 30ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷೆಯಲ್ಲಿ ನಕಲು, ನಕಲಿ ಅಭ್ಯರ್ಥಿಗಳ ಹಾಜರಾತಿ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಾಗದಂತೆ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರ ಅಡಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.
ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಅನಗತ್ಯವಾಗಿ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಈ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು, ಬುಕ್ಸ್ಟಾಲ್ಗಳು ಹಾಗೂ ಫೋಟೋಕಾಪಿ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಸೂಚಿಸಲಾಗಿದೆ.
ಅಭ್ಯರ್ಥಿಗಳು ಹಾಗೂ ಅನಧಿಕೃತ ವ್ಯಕ್ತಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಬ್ಲೂಟೂತ್ ಸಾಧನ, ಕ್ಯಾಮೆರಾ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ತರದಂತೆ ಸೂಚಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಮುತ್ತ ಡ್ರೋನ್ ಅಥವಾ ಯಾವುದೇ ವೈಮಾನಿಕ ಚಿತ್ರೀಕರಣ ಸಾಧನಗಳ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಲೌಡ್ಸ್ಪೀಕರ್ ಬಳಕೆ, ಪ್ರತಿಭಟನೆ, ಮೆರವಣಿಗೆ, ಘೋಷಣೆ ಕೂಗುವುದು ಹಾಗೂ ಸಾರ್ವಜನಿಕ ಸಭೆ ನಡೆಸುವುದಕ್ಕೂ ನಿರ್ಬಂಧ ವಿಧಿಸಲಾಗಿದೆ.
ಪರೀಕ್ಷೆಯ ಗೌಪ್ಯತೆ, ಸುಗಮ ಪರೀಕ್ಷಾ ಪ್ರಕ್ರಿಯೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಾರಿಗೊಳಿಸಿರುವ ಈ ಪ್ರತಿಬಂಧಕಾಜ್ಞೆಯು ಆಗಸ್ಟ್ 30ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 2.30ರವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / lalita MP