
ಕೋಲಾರ, 30 ಆಗಸ್ಟ್ ೩೦ (ಹಿ.ಸ.):
ಆ್ಯಂಕರ್ : ಮಹಾಮಾರಿಯಂತೆ ವ್ಯಾಪಿಸುತ್ತಿರುವ ಎಚ್೧ಎನ್೧ ಸಾಂಕ್ರಾಮಿಕ ರೋಗದ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ ಮೂಲಕ ವ್ಯಾಪಕ ಜಾಗೃತಿ ಮೂಡಿಸಬೇಕು. ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಆರೋಗ್ಯ ಸಚಿವರು ಹಾಗೂ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಕೋಲಾರ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಎಚ್೧ಎನ್೧ ರೋಗ ನಿಯಂತ್ರಣಕ್ಕೆ ಬರುವವರೆಗೂ ಕೋಲಾರದ ಸರ್ಕಾರಿ ಎಸ್.ಎನ್.ಆರ್. ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ೨೪ ಗಂಟೆಗಳ ವೈದ್ಯರ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವೈದ್ಯರನ್ನು ಬೇರೆಡೆಗೆ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದರು.
ಪ್ರತಿಯೊಬ್ಬ ಕೂಲಿ ಕಾರ್ಮಿಕರು ಸೇರಿದಂತೆ ಬಡ ಜನರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ಹಾಗೂ ಸೂಕ್ತ ಚಿಕಿತ್ಸೆ ದೊರೆಯುವಂತೆ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಅಗತ್ಯ ಔಷಧಿಗಳ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಮುಂಗಾರು ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯ ಸ್ಥಗಿತಗೊಂಡಿದೆ. ಬೆಳೆ ನಷ್ಟ, ಬೆಲೆ ಕುಸಿತ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಎಚ್೧ಎನ್೧ ಸಾಂಕ್ರಾಮಿಕ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆತಂಕ ಎದುರಾಗಿದ್ದು, ಕೋಲಾರ ಜಿಲ್ಲೆಯಲ್ಲಿಯೂ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.
ರೋಗದ ಲಕ್ಷಣಗಳು ಕಂಡುಬಂದ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು. ಉಚಿತ ತಪಾಸಣೆ, ಔಷಧಿ ಪೂರೈಕೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನೇಕ ಗ್ರಾಮಗಳಲ್ಲಿ ಚರಂಡಿಗಳನ್ನು ಸಮರ್ಪಕವಾಗಿ ಸ್ವಚ್ಛಗೊಳಿಸದ ಪರಿಣಾಮ ಕೊಳಚೆ ನೀರು ನಿಂತು ದುರ್ವಾಸನೆ ಉಂಟಾಗುತ್ತಿದೆ. ಇದರಿಂದ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳು ತಕ್ಷಣ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ದೊರೆಯುವುದಿಲ್ಲ ಎಂಬ ನೆಪದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳು ಹಾಗೂ ಪ್ರಯೋಗಾಲಯಗಳು ವಿವಿಧ ಪರೀಕ್ಷೆಗಳ ಹೆಸರಿನಲ್ಲಿ ರೋಗಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಖಾಸಗಿ ಆಸ್ಪತ್ರೆಗಳ ಅನಗತ್ಯ ಶುಲ್ಕ ವಸೂಲಿಗೆ ಕಡಿವಾಣ ಹಾಕಬೇಕು. ಇದಕ್ಕಾಗಿ ವಿಶೇಷ ತಂಡ ರಚಿಸಿ ಆಸ್ಪತ್ರೆ ಹಾಗೂ ಪ್ರಯೋಗಾಲಯಗಳ ಸೇವಾ ದರಗಳನ್ನು ನಿಗದಿಪಡಿಸಬೇಕು ಎಂದು ಹೇಳಿದರು.
ಶಾಲೆಗಳು, ಮಾರುಕಟ್ಟೆಗಳು, ತಾಲೂಕು ಕಚೇರಿಗಳು, ಸಾರಿಗೆ ಕೇಂದ್ರಗಳು ಸೇರಿದಂತೆ ಜನಸಂದಣಿ ಇರುವ ಪ್ರದೇಶಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸುವ ಜೊತೆಗೆ ಸ್ವಚ್ಛತಾ ಅಭಿಯಾನ ನಡೆಸಬೇಕು. ಎಚ್೧ಎನ್೧ ಸೇರಿದಂತೆ ಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ಹೊಂದಿರುವ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಕ್ಕಲೇರಿ ಹನುಮಯ್ಯ, ವೀರಭದ್ರಪ್ಪ, ತರ್ನಹಳ್ಳಿ ಆಂಜಿನಪ್ಪ, ಚಂದ್ರಪ್ಪ, ಸುಪ್ರೀಂ ಚಲ, ರಾಜು, ಗಿರೀಶ್, ರಾಜೇಂದ್ರರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್