ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ಸಾರಿಗೆ ಸಚಿವ ಭೈರತಿ ಸುರೇಶ್ ದಿಢೀರ್ ಭೇಟಿ
ಸಾರಿಗೆ ಸಚಿವ ಭೈರತಿ ಸುರೇಶ್ ದಿಢೀರ್ ಭೇಟಿ
bairathi-suresh-surprise-visit-ksrtc-bmtc-bus-stations-majestic-our-clinic-doctor-issue


ಬೆಂಗಳೂರು, 31 ಆಗಸ್ಟ್ (ಹಿ.ಸ.)

ಆ್ಯಂಕರ್:

ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಸೋಮವಾರ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣಗಳಿಗೆ ದಿಢೀರ್ ಭೇಟಿ ನೀಡಿ, ಪ್ರಯಾಣಿಕರಿಗೆ ಲಭ್ಯವಿರುವ ಸೌಲಭ್ಯಗಳು ಹಾಗೂ ಬಸ್ ನಿಲ್ದಾಣಗಳಲ್ಲಿನ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.

ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು, ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಬಳಿಕ ಪ್ರಯಾಣಿಕರೊಂದಿಗೆ ನೇರವಾಗಿ ಸಂವಾದ ನಡೆಸಿದರು. ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲೇ ಹಲವು ಸಮಸ್ಯೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯರು ಲಭ್ಯವಿಲ್ಲದಿರುವುದನ್ನು ಕಂಡು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರಯಾಣಿಕರು ಹಾಗೂ ಸಾರ್ವಜನಿಕರ ಆರೋಗ್ಯ ಸೇವೆಗೆ ತೊಂದರೆಯಾಗದಂತೆ ತಕ್ಷಣವೇ ವೈದ್ಯರನ್ನು ನಿಯೋಜಿಸುವಂತೆ ಸೂಚಿಸಿದರು. ಈ ಕುರಿತು ಆರೋಗ್ಯ ಇಲಾಖೆ ಆಯುಕ್ತರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಕಲ್ಪಿಸಬೇಕು. ಸ್ವಚ್ಛತೆ, ಕುಡಿಯುವ ನೀರು, ಆಸನ ವ್ಯವಸ್ಥೆ ಸೇರಿದಂತೆ ಪ್ರಯಾಣಿಕರಿಗೆ ಅಗತ್ಯವಿರುವ ಸೌಲಭ್ಯಗಳ ಬಗ್ಗೆ ನಿರಂತರವಾಗಿ ಗಮನಹರಿಸುವಂತೆ ಸಚಿವರು ಸೂಚಿಸಿದರು.

ಇದೇ ವೇಳೆ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ವಿತರಣೆಯಲ್ಲಿ ಉಂಟಾಗುತ್ತಿರುವ ಲೋಪ ಹಾಗೂ ವಿಳಂಬದ ಬಗ್ಗೆಯೂ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಪಾಸ್ ವಿತರಣೆಯಲ್ಲಿ ಯಾವುದೇ ರೀತಿಯ ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಚಿವರ ದಿಢೀರ್ ಭೇಟಿಯಿಂದ ಬಸ್ ನಿಲ್ದಾಣದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು. ಪ್ರಯಾಣಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಜೊತೆಗೆ, ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande