ರಸ್ತೆ ದೀಪ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೃಷ್ಣ ಬೈರೇಗೌಡ ಸೂಚನೆ
ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೃಷ್ಣ ಬೈರೇಗೌಡ ಸೂಚನೆ
krishna-byrе-gowda-orders-action-against-officials-over-poor-street-lighting-in-bengaluru


ಬೆಂಗಳೂರು, 31 ಆಗಸ್ಟ್ (ಹಿ.ಸ.)

ಆ್ಯಂಕರ್:

ನಗರದ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದ್ದಾರೆ.

ಹಡ್ಸನ್ ಸರ್ಕಲ್ನಿಂದ ಚಾಳುಕ್ಯ ಸರ್ಕಲ್ (ಬಸವೇಶ್ವರ ಸರ್ಕಲ್)ವರೆಗೆ ಸಚಿವರು ಪರಿಶೀಲನೆ ನಡೆಸಿದ ವೇಳೆ, ರಸ್ತೆಯಲ್ಲಿರುವ ಬೀದಿ ದೀಪಗಳ ಪೈಕಿ ಕೇವಲ 37 ಪ್ರತಿಶತ ದೀಪಗಳು ಮಾತ್ರ ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಪ್ರಮುಖ ರಸ್ತೆಯಲ್ಲಿಯೇ ಇಷ್ಟೊಂದು ಪ್ರಮಾಣದ ಬೀದಿ ದೀಪಗಳು ಕಾರ್ಯನಿರ್ವಹಿಸದಿರುವುದಕ್ಕೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶೇಷವೆಂದರೆ, ಈ ರಸ್ತೆಯುದ್ದಕ್ಕೂ ಹಲವು ಸರ್ಕಾರಿ ಕಚೇರಿಗಳು ಇದ್ದು, ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯವರ ನಿವಾಸಕ್ಕೂ ಇದೇ ಮಾರ್ಗ ಸಂಪರ್ಕ ಕಲ್ಪಿಸುತ್ತದೆ. ಇಂತಹ ಪ್ರಮುಖ ಪ್ರದೇಶದಲ್ಲಿಯೇ ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವುದು ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡಿಸಿದೆ.

ಬೀದಿ ದೀಪಗಳ ಸ್ಥಿತಿಗತಿ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರದ ದೃಷ್ಟಿಯಿಂದ ಪ್ರಮುಖ ರಸ್ತೆಗಳಲ್ಲಿನ ದೀಪಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸುವಂತೆಯೂ ಆಯುಕ್ತರಿಗೆ ನಿರ್ದೇಶನ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande